ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿಗಳ ಅವರಣದಲ್ಲಿ ಲಭ್ಯವಿರುವ ಸ್ಥಳಗಳಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಎಲ್ಲಾ ಅಧಿಕಾರಿಗಳು ಬದ್ಧರಾಗಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. ಅವರು ಮಂಗಳವಾರ ಅಜ್ಜರಕಾಡುವಿನ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಟ್ಟು ಮಾತನಾಡಿದರು. ಪರಿಸರ ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಗಿಡಮರಗಳನ್ನು ಉಳಿಸಿ, ಬೆಳೆಸುವುದು ಅತ್ಯಂತ ಅವಶ್ಯಕವಾಗಿದ್ದು, ಪ್ರತಿಯೊಬ್ಬರೂ ತಮ್ಮ ಮನೆಗಳ ಆವರಣದಲ್ಲಿ ಗಿಡಗಳನ್ನು ನೆಟ್ಟು ಪೋಷಿಸಬೇಕು. ಸರ್ಕಾರಿ ಕಚೇರಿಗಳಲ್ಲಿ ಸಹ ಗಿಡಗಳನ್ನು ನಡೆಸುವ ಕುರಿತಂತೆ ಎಲ್ಲಾ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಕೆ. ರಘುಪತಿ ಭಟ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು, ಡಿಹೆಚ್‌ಓ ಡಾ. ನಾಗಭೂಷಣ ಉಡುಪ, ಜಿಲ್ಲಾ ರೋಗ ವಾಹಕ ನಿಯಂತ್ರಣಾಧಿಕಾರಿ ಡಾ. ಪ್ರಶಾಂತ ಭಟ್, ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ, ಆರೋಗ್ಯ ಇಲಾಖೆಯ ಅಧಿಕಾರಿಗಳಾದ ಡಾ.ಪ್ರೇಮಾನಂದ, ಡಾ.ಎಂ.ಜಿ.ರಾಮ, ಡಾ.ರಾಮರಾವ್, ಡಾ. ಚಿದಾನಂದ ಮತ್ತಿತರರು ಉಪಸ್ಥಿತರಿದ್ದರು.