ಸಾರ್ವಜನಿಕ ಆರೋಗ್ಯವನ್ನು ರಕ್ಷಿಸುವ ನಿಟ್ಟಿನಲ್ಲಿ ಕೋವಿಡ್ ಸೋಂಕನ್ನು ನಿಯಂತ್ರಣಕ್ಕೆ ತರಲು ಎಲ್ಲಾ ರೀತಿಯ ಅವಶ್ಯಕ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಆಗ್ನೇಯ ಏಷ್ಯಾ ದೇಶಗಳಿಗೆ ವಿಶ್ವ ಆರೋಗ್ಯ ಸಂಸ್ಥೆ ಕರೆ ನೀಡಿದೆ. ಈ ದೇಶಗಳು ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆ ವೇಗಗೊಳಿಸಲು, ಮತ್ತೊಂದು ಉಲ್ಬಣವನ್ನು ತಡೆಗಟ್ಟಲು ಎಲ್ಲಾ ಪ್ರಯತ್ನಗಳನ್ನು ಮಾಡಬೇಕು.
ಕೋವಿಡ್ ಪರೀಕ್ಷೆ, ಪತ್ತೆ ಹಚ್ಚುವುದು ಮತ್ತು ಸೋಂಕಿತರನ್ನು ಪ್ರತ್ಯೇಕಿಸುವ ಪ್ರಯತ್ನಗಳನ್ನು ನಿರಂತರವಾಗಿ ಬಲಪಡಿಸುವ ಅವಶ್ಯಕತೆಯಿದೆ ಎಂದು ಹೇಳಿದ ವಿಶ್ವ ಆರೋಗ್ಯ ಸಂಸ್ಥೆಯ ಆಗ್ನೇಯ ಏಷ್ಯಾದ ಪ್ರಾದೇಶಿಕ ನಿರ್ದೇಶಕರಾದ ಡಾ.ಪೂನಂ ಖೇತ್ರಪಾಲ್ ಸಿಂಗ್, ವ್ಯಕ್ತಿಗತ ಅಂತರ, ಕೈಗಳ ಸ್ವಚ್ಛತೆ ಮತ್ತು ಮಾಸ್ಕ್ ಧರಿಸುವುದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕಾಗಿದೆ. ಈ ಕ್ರಮಗಳು ದೀರ್ಘಾವಧಿಯಲ್ಲಿ ಸಂಪೂರ್ಣ ಜಾರಿಯಲ್ಲಿರಬೇಕು ಎಂದು ಹೇಳಿದರು.