ಜಿಲ್ಲೆಯಲ್ಲಿ ಕೋವಿಡ್ 3 ನೇ ಅಲೆಯನ್ನು ಎದುರಿಸಲು ಮುಂಜಾಗ್ರತೆಯಾಗಿ “ವಾತ್ಸಲ್ಯ” ಕಾರ್ಯಕ್ರಮದಡಿಯಲ್ಲಿ ಆಗಸ್ಟ್ 15 ರ ಒಳಗೆ ಜಿಲ್ಲೆಯ 2.40 ಲಕ್ಷ ಮಕ್ಕಳ ಸಂಪೂರ್ಣ ಆರೋಗ್ಯ ತಪಾಸಣೆ ನಡೆಸಲಾಗುವುದು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಸೋಮವಾರ ಕಾರ್ಕಳದಲ್ಲಿ “ವಾತ್ಸಲ್ಯ” ಮಕ್ಕಳ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಕೋವಿಡ್ 3ನೇ ಅಲೆಯು ಮಕ್ಕಳಿಗೆ ಹೆಚ್ಚಾಗಿ ಹರಡುವ ಸಾಧ್ಯತೆಗಳಿದ್ದು, ಇದನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕಾದ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಮಕ್ಕಳ ಸಂಪೂರ್ಣ ಆರೋಗ್ಯ ತಪಾಸಣೆ ನಡೆಸಲಾಗುತ್ತಿದ್ದು, ಶಿಬಿರದಲ್ಲಿ ಅಪೌಷ್ಠಿಕತೆಯಿಂದ ಕೂಡಿದ ಮಕ್ಕಳನ್ನು ಗುರುತಿಸಿ, ಪೌಷ್ಠಿಕ ಆಹಾರ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡುವ ಔಷಧಿಗಳ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಮಕ್ಕಳಿಗೆ ಅಗತ್ಯ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದರು.
ರಾಜ್ಯದಲ್ಲಿ ಕೋವಿಡ್ ಮೊದಲನೇ ಹಾಗೂ ಎರಡನೇ ಅಲೆಯ ಅಲ್ಪಾವಧಿಯಲ್ಲಿ 24,000 ಆಕ್ಸಿಜನ್ ಬೆಡ್, ಸುಮಾರು 5,000 ಕ್ಕಿಂತ ಹೆಚ್ಚು ಐ.ಸಿ.ಯು ಬೆಡ್ ಹಾಗೂ 2,000 ಕ್ಕಿಂತ ಹೆಚ್ಚು ವೆಂಟಿಲೇಟರ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಪ್ರಧಾನ ಮಂತ್ರಿಗಳ ಸಂಪೂರ್ಣ ಬೆಂಬಲದಿಂದ ಕೋವಿಡ್ ಲಸಿಕೆಗಳು ಸಕಾಲಕ್ಕೆ ದೊರೆತಿದೆ. ಅದೇ ರೀತಿ ಇಡೀ ರಾಜ್ಯಕ್ಕೆ ಆಕ್ಸಿಜನ್ ಪೂರೈಕೆಯನ್ನು ಮಾಡಲಾಗಿದೆ ಎಂದರು.
ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಮಾತನಾಡಿ, ವಾತ್ಯಲ್ಯ ಕಾರ್ಯಕ್ರಮದಲ್ಲಿ ತಾಲೂಕಿನ 40,000 ಮಕ್ಕಳನ್ನು ಆರೋಗ್ಯ ತಪಾಸಣೆಗೊಳಪಡಿಸಲಾಗುವುದು. ತಾಲೂಕಿನ 230 ಅಂಗನವಾಡಿಗಳು, 246 ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮಕ್ಕಳು ತಪಾಸಣಾ ಶಿಬಿರದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಕಾರ್ಕಳ ಪುರಸಭೆ ಅಧ್ಯಕ್ಷೆ ಸುಮಾ, ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ನಕಲ್ಸ್ ನಿಗ್ರಹ ಪಡೆಯ ಎಸ್ಪಿ ನಿಖಿಲ್, ಕುಂದಾಪುರ ಸಹಾಯಕ ಕಮೀಷನರ್ ರಾಜು ಕೆ, ಡಿಹೆಚ್‌ಓ ಡಾ. ನಾಗಭೂಷಣ ಉಡುಪ, ತಾಲೂಕು ಆರೋಗ್ಯಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.