ಉಡುಪಿ ಜಿಲ್ಲಾಡಳಿತಕ್ಕೆ ಸುಮಾರು 27 ಲಕ್ಷ ರೂ. ಮೌಲ್ಯದ 2 ಆಂಬುಲೈನ್ಸ್ ಗಳನ್ನು ಆನ್‌ಶೋರ್ ಕನ್ಸ್ಟ್ರಕ್ಷನ್ ಕಂಪೆನಿ ಪ್ರೈ ಲಿ. ವತಿಯಿಂದ ಶನಿವಾರ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ, ಕಾಣಿಯೂರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರಿಗೆ ಹಸ್ತಾಂತರಿಸಲಾಯಿತು.
ನಂತರ ಮಾತನಾಡಿದ ಶ್ರೀವಿದ್ಯಾವಲ್ಲಭ ತೀರ್ಥ ಶ್ರೀಪಾದರು, ಕೋವಿಡ್‌ನ ಈ ಸಂಕಷ್ಟವು ಆದಷ್ಟು ಬೇಗ ಮುಕ್ತಾಯವಾಗಿ, ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಾಗಿರಲಿ ಎಂದು ಹಾರೈಸಿದರು.
ಜಿಲ್ಲಾಧಿಕಾರಿ ಜಿ.ಜಗದೀಶ್ ಮಾತನಾಡಿ, ಆ್ಯನ್‌ಶೋರ್ ಕಂಪನಿ ವತಿಯಿಂದ ನೀಡಲಾದ ಈ ಎರಡು ಆಂಬುಲೆನ್ಸ್ಗಳನ್ನು ಉಡುಪಿ ಹಾಗೂ ಕಾಪು ತಾಲೂಕು ಆರೋಗ್ಯ ಕೇಂದ್ರಗಳಿಗೆ ನೀಡಲಾಗುವುದು ಎಂದರು. ಕಂಪೆನಿಯ ಮುಖ್ಯಸ್ಥರಿಗೆ ಜಿಲ್ಲಾಡಳಿತ ಪರವಾಗಿ ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿಹೆಚ್‌ಓ ಡಾ.ನಾಗಭೂಷಣ ಉಡುಪ, ಆ್ಯನ್‌ಶೋರ್ ಕನ್ಸ್ಟ್ರಕ್ಷನ್ ಕಂಪನಿಯ ಹರೀಶ್ ಶೆಟ್ಟಿ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಮತ್ತಿತರರು ಉಪಸ್ಥಿತರಿದ್ದರು.