ವೈದ್ಯಕೀಯ ಕೋರ್ಸುಗಳ (ಪದವಿ) ಪ್ರವೇಶಾತಿಗೆ ಸಂಬಂಧಿಸಿದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ 2021 (ನೀಟ್) ಸೆಪ್ಟೆಂಬರ್ 12 ರಂದು ನಡೆಯಲಿದೆ.
ಈ ಕುರಿತು ಸೋಮವಾರ ಮಾಹಿತಿ ನೀಡಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ದೇಶಾದ್ಯಂತ ಕೋವಿಡ್ ಸುರಕ್ಷತಾ ಕ್ರಮಗಳನ್ನು ಅನುಸರಿಸಿಕೊಂಡು ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ನಾಳೆ (ಜುಲೈ 13) ಸಂಜೆ 5 ಗಂಟೆಯಿಂದ ಎನ್.ಟಿ.ಎ ವೆಬ್ ಸೈಟ್ ನಲ್ಲಿ ಆರಂಭಗೊಳ್ಳಲಿದೆ ಎಂದು ಹೇಳಿದರು.
ದೈಹಿಕ ಅಂತರವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ದೇಶಾದ್ಯಂತ ಪರೀಕ್ಷೆ ನಡೆಯುವ ನಗರಗಳ ಸಂಖ್ಯೆಯನ್ನು 155 ರಿಂದ 198 ಕ್ಕೆ ಹೆಚ್ಚಿಸಲಾಗಿದೆ. ಅದೇ ರೀತಿ ಪರೀಕ್ಷಾ ಕೇಂದ್ರಗಳಲ್ಲಿ ಕೂಡ ಹೆಚ್ಚಳ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಕಳೆದ ವರ್ಷ 3,862 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಎಲ್ಲಾ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಮಾಸ್ಕ್ ಗಳನ್ನು ನೀಡಲಾಗುವುದು. ಪರೀಕ್ಷೆ ನಡೆಯುವ ಕೊಠಡಿಗಳಲ್ಲಿ ಸ್ಯಾನಿಟೈಸ್ ಮಾಡಲಾಗುವುದು, ಶುದ್ಧ ಗಾಳಿಯಾಡಲು ವ್ಯವಸ್ಥೆ ಮಾಡಲಾಗುವುದು ಎಂದು ಸಚಿವರು ಹೇಳಿದ್ದಾರೆ.
ಈ ಹಿಂದೆ ಆಗಸ್ಟ್ 1 ರಂದು ನೀಟ್ ಪರೀಕ್ಷೆ ನಿಗದಿಯಾಗಿತ್ತು.