ಉಡುಪಿ: ಪ್ರತಿಯೊಬ್ಬ ನಾಗರಿಕನೂ ಸಾಮಾನ್ಯ ಕಾನೂನಿನ ಅರಿವು ಹೊಂದಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯೆ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್ ಹೇಳಿದರು.
ಅವರು ಇಂದು ನಗರದ ಮಣಿಪಾಲ್‌ನ ಮಾಧವ ಕೃಪ ಶಾಲೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವಕೀಲರ ಸಂಘ, ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆ, ಶಿಕ್ಷಣ ಇಲಾಖೆ, ಸಾರಿಗೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಪೋಲಿಸ್ ಇಲಾಖೆ, ಅರಣ್ಯ ಇಲಾಖೆ, ಹಾಗೂ ವಿವಿಧ ಇಲಾಖೆ ಮತ್ತು ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ 75 ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕೋವಿಡ್-19 ಜಾಗೃತಿ ಮತ್ತು ಲಸಿಕಾ ಅಭಿಯಾನ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮನುಷ್ಯ ಹುಟ್ಟಿನಿಂದ ಸಾಯುವವರೆಗೂ ಕಾನೂನಿನ ಚೌಕಟ್ಟಿನಲ್ಲಿಯೇ ತನ್ನ ಎಲ್ಲಾ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕು. ಈ ಹಿನ್ನಲೆಯಲ್ಲಿ ಕಾನೂನಿನ ಸಾಮಾನ್ಯಜ್ಞಾನವನ್ನು ಹೊಂದುವುದು ಅವಶ್ಯವಾಗಿದೆ. ಕಾನೂನು ಅರಿವು ಮತ್ತು ನೆರವು ನೀಡುವ ಕಾರ್ಯವನ್ನು ಕಾನೂನು ಸೇವಾ ಪ್ರಾಧಿಕಾರವು ಹಲವು ವರ್ಷಗಳಿಂದ ನಿರಂತರವಾಗಿ ನಿರ್ವಹಿಸುತ್ತಿದೆ ಎಂದರು.
ಸರಕಾರವು ಕೋವಿಡ್ ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕೆ ಅನೇಕ ಮಾರ್ಗದರ್ಶನಗಳನ್ನು ನೀಡಿ, ಉತ್ತಮ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಕೋವಿಡ್‌ನಿಂದ ಸಂಕಷ್ಟಕ್ಕೆ ಒಳಗಾದವರಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಜನರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಕಾನೂನಿನ ಅರಿವು ಹಾಗೂ ನೆರವಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು 45 ದಿನಗಳ ಸರಣಿ ಜಾಗೃತಿ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದ ಅವರು ಕಾನೂನಿನ ಅರಿವು ಮೂಡಿಸಿ ಅವರ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಮಾರ್ಗದರ್ಶನವನ್ನು ಸಹ ಜಾಗೃತಿ ಕಾರ್ಯಕ್ರಮದಲ್ಲಿ ನೀಡಲಾಗುವುದು ಎಂದರು.
ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್, ಮೆಘಾ ಲೋಕ್ ಅದಾಲತ್‌ಗಳಲ್ಲಿ ರಾಜಿ ಸಂಧಾನದ ಮೂಲಕ 2,020 ಪ್ರಕರಣಗಳನ್ನು ಹಾಗೂ 132 ವ್ಯಾಜ್ಯಪೂರ್ವ ದಾವೆಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದರು.
ಕಾನೂನು ಸೇವಾ ಪ್ರಾಧಿಕಾರವು ಸಮಾಜದ ದುರ್ಬಲ ವರ್ಗದವರಿಗೆ, ಅಸಹಾಯಕರಿಗೆ ಮತ್ತು ವಿಶೇಷಚೇತನರಿಗೆ, ಮಾನಸಿಕ ಅಸ್ವಸ್ಥರಿಗೆ ಹಾಗೂ ವಾರ್ಷಿಕ ಆದಾಯ 3 ಲಕ್ಷಕ್ಕಿಂತ ಕಡಿಮೆ ಇರುವವರಿಗೆ ಉಚಿತ ಕಾನೂನು ನೆರವು ನೀಡುತ್ತದೆ ಎಂದರು.
ಪ್ರಧಾನ ಸಿವಿಲ್ ನ್ಯಾಯಾಧೀಶೆ ದೀಪಾ ಮಾತನಾಡಿ, ಸರಕಾರ ನೀಡುವ ಯೋಜನೆಗಳು ಹಾಗೂ ಸೌಲಭ್ಯವನ್ನು ಪಡೆಯುವುದರ ಜೊತೆಗೆ ಕಾನೂನು ಸೇವಾ ಪ್ರಾಧಿಕಾರ ಒದಗಿಸುವ ಅರಿವು ಮತ್ತು ನೆರವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಡಾ.ಅಶ್ವಿನಿ ಕುಮಾರ್ ಮಾತನಾಡಿ, ಕೋವಿಡ್-19 ಒಂದು ವಿಶ್ವದ ಸಾಂಕ್ರಾಮಿಕ ಪಿಡುಗು ಅದಕ್ಕೆ ಹಲವಾರು ರಾಷ್ಟ್ರಗಳು ಔಷಧಿಯನ್ನು ಕಂಡುಹಿಡಿಯುವಲ್ಲಿ ನಿರತರಾಗಿದ್ದು, ಈ ವರೆಗೆ ಪರಿಪೂರ್ಣತೆಯ ಔಷಧಿಯನ್ನು ಕಂಡುಹಿಡಿಯುವಲ್ಲಿ ಸಫಲರಾಗಿರುವುದಿಲ್ಲ, ಆದ್ದರಿಂದ ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ತಾವೇ ಕಾಳಜಿ ವಹಿಸಿಕೊಳ್ಳುವುದರ ಜೊತೆಗೆ ರೋಗನಿರೋಧಕವನ್ನು ಹೆಚ್ಚಿಸುವ ಲಸಿಕೆಯನ್ನು ಪ್ರತಿಯೊಬ್ಬರು ಪಡೆಯಬೇಕು ಎಂದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಿ. ನಾಗರಾಜ ಮಕ್ಕಳ ಹಕ್ಕು ಮತ್ತು ರಕ್ಷಣೆ ಕುರಿತು ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಚಾರ್ಮಿನ್, ಬಿ.ವಿ ಪಂಡಿತ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ್ ಉಡುಪ ಸ್ವಾಗತಿಸಿ ರಾಜೇಶ್ ವಂದಿಸಿದರು, ಡಾ.ಅಂಜಲಿ ವಾಗ್ಲೆ ನಿರೂಪಿಸಿದರು.