ಉಡುಪಿ: ಹೊಸ ಶಿಕ್ಷಣ ನೀತಿಯಲ್ಲಿ ವಿದ್ಯಾರ್ಥಿಗಳ ಬೆಳವಣಿಗೆಗೆ ಸಾಕಷ್ಟು ಅವಕಾಶಗಳಿವೆ. ಕೌಶಲ್ಯಗಳ ಕಲಿಕೆಗೆ ಹೆಚ್ಚು ಮಹತ್ವ ನೀಡಲಾಗಿದೆ. ಇದನ್ನು ಅರ್ಥಮಾಡಿಕೊಂಡು ಹೊಸ ಶಿಕ್ಷಣ ನೀತಿಯನ್ನು ಅನುಷ್ಠಾನ ಮಾಡಬೇಕಾದ ಅಗತ್ಯವಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ನಾರಾಯಣಗುರು ಹಾಗೂ ರಾಣಿ ಅಬ್ಬಕ್ಕ ಪೀಠದ ಸಂಚಾಲಕರಾದ ಡಾ. ಗಣೇಶ್ ಅಮೀನ್ ಸಂಕಮಾರ್ ಹೇಳಿದರು.
ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಐ.ಕ್ಯೂ.ಎ.ಸಿ ಆಶ್ರಯದಲ್ಲಿ ಪಿ.ಯು.ಸಿ ವಿದ್ಯಾರ್ಥಿಗಳಿಗಾಗಿ ನಡೆದ ಹೊಸಶಿಕ್ಷಣ ನೀತಿಯ ಕುರಿತಾಗಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದ್ದರು.
ಹೊಸಶಿಕ್ಷಣ ನೀತಿಯ ಉದ್ದೇಶ ಮತ್ತು ಆಶಯಗಳನ್ನು ವಿವರಿಸಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಮಂಜುಳಾ ಪ್ರಸಾದ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು ಅಧ್ಯಕ್ಷತೆ ವಹಿಸಿದ್ದರು. ಐ.ಕ್ಯೂ.ಎ.ಸಿ ಸಂಯೋಜಕ ಡಾ. ಸುರೇಶ್ ರೈ ಕೆ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಕರಬ ಉಪಸ್ಥಿತರಿದ್ದರು.
ರಾಷ್ಟ್ರೀಯ ಶಿಕ್ಷಣ ನೀತಿ ಕಾಲೇಜು ಟಾಸ್ಕ್ ಪೋರ್ಸಿನ ಮುಖ್ಯಸ್ಥೆ ಡಾ. ಸುನೀತಾ ಎಂ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥ ಉಮೇಶ್ ಪೈ ವಂದಿಸಿದರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಶರ್ಮಿಳಾ ಹಾರಾಡಿ ನಿರೂಪಿಸಿದರು.