ಉಡುಪಿ: ಮಕ್ಕಳನ್ನು ಬಾಲ ಕಾರ್ಮಿಕರನ್ನಾಗಿ ದುಡಿಸಿಕೊಳ್ಳುವುದು, ಬಾಲ್ಯ ವಿವಾಹಗಳಿಗೆ ಒಳಪಡಿಸುವುದು ಸೇರಿದಂತೆ ಮಕ್ಕಳ ಮೇಲೆ ನಡೆಯುವ ಶೋಷಣೆಗಳ ಕುರಿತು ಮಾಹಿತಿ ಇದ್ದಲ್ಲಿ, ಸಾರ್ವಜನಿಕರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಪೊಲೀಸ್ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ ಕೂಡಲೇ ಮಾಹಿತಿ ನೀಡುವುದರ ಮೂಲಕ, ಮಕ್ಕಳನ್ನು ಶೋಷಣೆಯಿಂದ ತಪ್ಪಿಸಲು ಸಾಧ್ಯ ಎಂದು ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಜೆ.ಎನ್. ಸುಬ್ರಮಣ್ಯ ಹೇಳಿದರು.
ಅವರು ಇಂದು ವಿದ್ಯೋದಯ ಪಬ್ಲಿಕ್ ಸ್ಕೂಲ್ ನಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ(ರಿ), ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ 1098, ವಿದ್ಯೋದಯ ಪಬ್ಲಿಕ್ ಸ್ಕೂಲ್ ಸಹಯೋಗದಲ್ಲಿ ನಡೆದ ಮಕ್ಕಳ ದಿನಾಚರಣೆ 2021 ಹಾಗೂ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಆಚರಣೆಯ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮಗಳ ಸಮಾರೋಪ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ಹಲವು ಕಾನೂನುಗಳು ಜಾರಿಯಲ್ಲಿವೆ ಆದರೂ ಸಹ ಬಾಲಕಾರ್ಮಿಕರ ಬಳಕೆ ಮತ್ತು ಬಾಲ್ಯ ವಿವಾಹಗಳು ಗುಪ್ತವಾಗಿ ನಡೆಯುತ್ತಲೇ ಇವೆ. ಸಾರ್ವಜನಿಕರು ಇಂತಹ ಪ್ರಕರಣಗಳು ಕಂಡುಬಂದಲ್ಲಿ ಮಾಹಿತಿ ನೀಡಬೇಕು.
ಜಿಲ್ಲೆಯಲ್ಲಿ 75 ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಅಕ್ಟೋಬರ್ 2 ರಿಂದ ನವೆಂಬರ್ 14 ರ ವರೆಗೆ 734 ಕಾನೂನು ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿದ್ದು, 267 ಗ್ರಾಮಗಳ 44419 ಫಲಾನುಭವಿಗಳಿಗೆ ಕಾನೂನು ಅರಿವು ಮೂಡಿಸಲಾಗಿದೆ. ಅಲ್ಲದೇ ಆಶಾ ಕಾರ್ಯಕರ್ತೆಯರ, ಅಂಗನವಾಡಿ ಕಾರ್ಯಕರ್ತೆಯರು, ಪೌರಕಾಮಿಕರು, ನ್ಯಾಯಾಲಯದ ಸಿಬ್ಬಂದಿಗಳು, ಪೊಲೀಸರ ಮೂಲಕ ಮನೆಮನೆ ಬೇಟಿ ಮುಖಾಂತರ 2,35,623 ಮಂದಿಗೆ ದಿನನಿತ್ಯದಲ್ಲಿ ಅಗತ್ಯವಿರುವ ಕಾನೂನುಗಳ ಬಗ್ಗೆ ಅರಿವು ಮೂಡಿಸಲಾಗಿದೆ ಎಂದು ಜಿಲ್ಲಾ ನ್ಯಾಯಾಧೀಶರು ಹೇಳಿದರು.
ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಜಿಲ್ಲೆಯಲ್ಲಿ ಮಕ್ಕಳನ್ನು ಬಾಲ ಕಾರ್ಮಿಕ ಪದ್ದತಿಯಿಂದ ಮುಕ್ತಗೊಳಿಸಲು ಬಾಲ ಕಾರ್ಮಿಕರ ಕುರಿತು ಸಮೀಕ್ಷೆ ನಡೆಸಲಾಗುತ್ತಿದೆ. ಜನಜಾಗೃತಿಯಿಂದ ಮಾತ್ರ ಮಕ್ಕಳ ಮೇಲಿನ ಶೋಷಣೆಗಳನ್ನು ತಪ್ಪಿಸಲು ಸಾಧ್ಯ. ಸಾರ್ವಜನಿಕರು ಕಾನೂನುಗಳ ಕುರಿತು ಅರಿವು ಹೊಂದಿದ್ದು, ಮಕ್ಕಳ ಶೋಷಣೆ ಪ್ರಕರಣ ಕಂಡು ಬಂದಲ್ಲಿ ಕೂಡಲೇ ಮಾಹಿತಿ ನೀಡಬೇಕು. ಇದರಿಂದ ಮಕ್ಕಳನ್ನು ಅಲ್ಲಿಂದ ರಕ್ಷಿಸಲು ಮತ್ತು ಅವರಿಗೆ ಸೂಕ್ತ ರಕ್ಷಣೆ ಹಾಗೂ ಪುರ್ನವಸತಿ ಒದಗಿಸಲು ಸಾದ್ಯವಾಗಲಿದೆ ಎಂದರು.
ಮಕ್ಕಳ ದಿನಾಚರಣೆ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಬಾಲಕಿಯರ ಬಾಲಮಂದಿರದ ಮಕ್ಕಳಿಂದ ಬಾಲ್ಯ ವಿವಾಹ ತಡೆ, ಬಾಲ ಕಾರ್ಮಿಕ ತಡೆ,ಭಿಕ್ಷಾಟನೆ ತಡೆ ಕುರಿತು ಕಿರುನಾಟಕ ಪ್ರದರ್ಶನ ನಡೆಯಿತು.
ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶೆ ಕಲ್ಪನಾ ಎರ್ಮಾಳ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರೊನಾಲ್ಡ್ ಬಿ ಪುರ್ಟಾಡೋ, ಪ.ಪೂ. ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಾರುತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎನ್.ಹೆಚ್. ನಾಗೂರ, ಕಾರ್ಮಿಕ ನಿರೀಕ್ಷಕ ಪ್ರವೀಣ್ ಕುಮಾರ್, ಮಕ್ಕಳ ಸಹಾಯವಾಣಿ ನಿರ್ದೇಶಕ ರಾಮಚಂದ್ರ ಉಪಾಧ್ಯಾಯ ಉಪಸ್ಥಿತರಿದ್ದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ್ ನಾಯ್ಕ್ ಸ್ವಾಗತಿಸಿ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ವಂದಿಸಿದರು. ಎನ್.ಆರ್.ಎಲ್.ಎಂ ನ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್ ನಿರೂಪಿಸಿದರು.