ಉಡುಪಿ: ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಬಲವಾಗಿ ಬೇರೂರಲು ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳು ಕಾರಣವಾಗಿದೆ. ಸಮಾನತೆ ಸ್ವಾತಂತ್ರ್ಯ ಮತ್ತು ಸಹೋದರತೆಯ ಸಂವಿಧಾನದ ಆಶಯಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕಾದರೆ ಅಂಬೇಡ್ಕರ್ ಅವರ ಚಿಂತನೆಗಳನ್ನು ಅರ್ಥಮಾಡಿಕೊಳ್ಳಬೇಕು.
ಸಂವಿಧಾನ ನಮ್ಮ ದೇಶದ ಬಹುತ್ವದ ಸಂಸ್ಕೃತಿಗೆ ಪೂರಕವಾಗಿ ರೂಪುಗೊಂಡಿದೆ ಎಂದು ಕನ್ನಡ ವಿಭಾಗದ ಮುಖ್ಯಸ್ಥ ಚಿಂತಕ ಡಾ. ಜಯಪ್ರಕಾಶ್ ಶೆಟ್ಟಿ ಅಭಿಪ್ರಾಯಪಟ್ಟರು.
ಅವರು ಕನ್ನಡ ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು.
ಕಾಲೇಜಿನ ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಖ್ಯಾತ ಗಾಯಕ ಶಂಕರದಾಸ್ ಚಂಡ್ಕಳ ಅಂಬೇಡ್ಕರ್ ಗೀತೆಗಳನ್ನು ಹಾಡಿದರು.
ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಕರಬ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ಅಂಬೇಡ್ಕರ್ ಓದುಗೆ ಸಂಬಂಧಿಸಿದಂತೆ ಭಾಷಣ ಮತ್ತು ರಸಪ್ರಶ್ನೆ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಐ.ಕ್ಯೂ.ಎ.ಸಿ. ಸಂಚಾಲಕ ಡಾ. ಸುರೇಶ್ ರೈ ಕೆ. ಹಾಗೂ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ. ಮಂಜುನಾಥ ಅವರು ಉಪಸ್ಥಿತರಿದ್ದರು.
ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಬೆಕ್ಕೇರಿಯವರು ಸ್ವಾಗತಿಸಿ, ಉಪನ್ಯಾಸಕ ದಯಾನಂದ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.