ಉಡುಪಿ: ರಾಜ್ಯ ಬಿಜೆಪಿಯ ನೂತನ ಉಪಾಧ್ಯಕ್ಷರಾಗಿ ನಿಯುಕ್ತಿಗೊಂಡಿರುವ ನಯನಾ ಗಣೇಶ್ ಉದ್ಯಾವರ ಇವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯತಂಡದ ಸಭೆಯಲ್ಲಿ ಸನ್ಮಾನಿಸಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿದರು. ನಯನಾ ಗಣೇಶ್ ರವರು ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ವಿವಿಧ ಸ್ತರದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ ಇದೀಗ ರಾಜ್ಯ ಬಿಜೆಪಿಯ ನೂತನ ಉಪಾಧ್ಯಕ್ಷರಾಗಿ ನೇಮಕಗೊಂಡಿರುವುದು ಸಂತಸ ತಂದಿದೆ.
ರಾಜ್ಯ ತಂಡದಲ್ಲಿ ಉಡುಪಿ ಜಿಲ್ಲೆಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಿರುವ ರಾಜ್ಯ ಬಿಜೆಪಿಗೆ ಅಭಿನಂದನೆಗಳು. ಉಡುಪಿ ಜಿಲ್ಲೆಗೆ ರಾಜ್ಯ ಉಪಾಧ್ಯಕ್ಷರ ಸ್ಥಾನ ದೊರೆತಿರುವುದು ಹೆಮ್ಮೆ ತಂದಿದೆ. ನಯನಾ ಗಣೇಶ್ ರವರು ರಾಜ್ಯ ಉಪಾಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ಅತ್ಯಂತ ಸಮರ್ಪಕವಾಗಿ ನಿಭಾಯಿಸುವಂತಾಗಲಿ ಎಂದು ಶುಭ ಹಾರೈಸಿದರು.
ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಪಕ್ಷದ ಓರ್ವ ಸಾಮಾನ್ಯ ಕಾರ್ಯಕರ್ತೆಗೆ ರಾಜ್ಯ ಉಪಾಧ್ಯಕ್ಷೆಯ ಸ್ಥಾನಮಾನ ದೊರೆತಿರುವುದು ಪಕ್ಷದ ಕಾರ್ಯಕರ್ತರಿಗೆ ಸಂದ ಗೌರವ. ಇಂತಹ ಮಾದರಿ ಕ್ರಮಗಳಿಂದ ಬಿಜೆಪಿ ‘ಪಾರ್ಟಿ ವಿದ್ ಎ ಡಿಫರೆನ್ಸ್’ ಎಂದು ಕರೆಲ್ಪಡುತ್ತದೆ.
ಸದವಕಾಶವನ್ನು ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಂಘಟನೆಯ ಪ್ರಮುಖರಿಗೆ ವಂದನೆಗಳನ್ನು ಸಲ್ಲಿಸುತ್ತೇನೆ. ಅವಕಾಶವನ್ನು ಸದುಪಯೋಗಗೊಳಿಸಿ ಪಕ್ಷ ಸಂಘಟನೆಗೆ ಒತ್ತು ನೀಡಿ ಬದ್ಧತೆಯಿಂದ ಕಾರ್ಯನಿರ್ವಹಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಎಂದರು.
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ, ಗೀತಾಂಜಲಿ ಎಮ್. ಸುವರ್ಣ, ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಹಾಗೂ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.