ಉಡುಪಿ: ಉಡುಪಿಯ ಅಜ್ಜರಕಾಡು ಮಹಾತ್ಮ ಗಾಂಧೀ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಧ್ವಜಾರೋಹಣ ನೆರವೇರಿಸಿ ಮಹಾತ್ಮ ಗಾಂಧೀ ಮತ್ತು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗಣರಾಜ್ಯೋತ್ಸವದ ಸಂದೇಶ ನೀಡಿದರು.
ಪೊಲೀಸ್, ಕರಾವಳಿ ಕಾವಲು ಪಡೆ, ಅಗ್ನಿಶಾಮಕ, ಗೃಹರಕ್ಷಕ, ಅಬಕಾರಿ, ಅರಣ್ಯ ಮತ್ತು ಕಾಲೇಜು ಎನ್.ಸಿ.ಸಿ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಸಾಧನೆ ಮಾಡಿದ ವಿಕಲಚೇತನ ಮಕ್ಕಳಾದ ಶ್ರೀಕೃಷ್ಣ ಮತ್ತು ಅರ್ಚನಾ ಅವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಮತ್ತು ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಯನ್ನು ಕೃಷಿಕರಿಗೆ ನೀಡಲಾಯಿತು. ಕಾರ್ಮಿಕ ಇಲಾಖೆಯ ಆಶಾದೀಪ ಯೋಜನೆಯಡಿ ಚೆಕ್ ವಿತರಿಸಲಾಯಿತು.
ಉಡುಪಿ ಶಾಸಕ ಕೆ. ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ., ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಕರಾವಳಿ ಕಾವಲು ಪಡೆಯ ಎಸ್ಪಿ ಅಂಶುಕುಮಾರ್, ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ಉಪಸ್ಥಿತರಿದ್ದರು.
ಕೋವಿಡ್ 19 ಹಿನ್ನಲೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಯೂಟ್ಯೂಬ್ ಮತ್ತು ಸ್ಥಳೀಯ ಕೇಬಲ್ ಟಿವಿಯಲ್ಲಿ ನೇರ ಪ್ರಸಾರ ವ್ಯವಸ್ಥೆ ಮಾಡಲಾಗಿತ್ತು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸ್ವಾಗತಿಸಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಷನ್ ಕುಮಾರ್ ಶೆಟ್ಟಿ ವಂದಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿದರು.