ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಡಾ. ಪಿ. ದಯಾನಂದ ಪೈ- ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು, ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ರೆಡ್ ರಿಬ್ಬನ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರವರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಯುವ ದಿನಾಚರಣೆ 2022 ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ಪ್ರೊ. ರಾಜಶೇಖರ ಹೆಬ್ಬಾರ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಯುವಜನರು ದೇಶದ ಆಸ್ತಿ. ವಿದ್ಯಾರ್ಥಿ ದೆಸೆಯಿಂದ ಗೆಳೆಯರನ್ನು ಆಯ್ಕೆ ಮಾಡುವಾಗ ವಹಿಸುವ ಎಚ್ಚರಿಕೆ ವ್ಯಕ್ತಿತ್ವ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಯುವಜನರು ಲಭ್ಯವಿರುವ ಸಂಪನ್ಮೂಲಗಳ ಸದ್ಬಳಕೆ ಮಾಡುವ ಮೂಲಕ ಯೋಜಿತ ಕಾರ್ಯಗಳನ್ನು ಕ್ಲಪ್ತ ಸಮಯದಲ್ಲಿ ಸಾಧಿಸಬೇಕು ಎಂದರು.
ಜಿಲ್ಲಾ ಏಡ್ಸ್ ನಿಯಂತ್ರಣ ತಡೆಗಟ್ಟುವಿಕೆ ಘಟಕದ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ. ಬದ್ರುದ್ದೀನ್ ಎಂ.ಎಸ್. ಅಧ್ಯಕ್ಷತೆ ವಹಿಸಿದ್ದರು. ಏಡ್ಸ್ ತಡೆಗಟ್ಟುವಿಕೆ ಮತ್ತು ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಯುವಜನರ ಪಾತ್ರದ ಬಗ್ಗೆ ಬೆಳಕು ಚೆಲ್ಲಿದರು.
ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಸಸ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಜಯಕರ ಭಂಡಾರಿ ಅವರು, ಸಣ್ಣ ಸಣ್ಣ ಗುರಿಗಳನ್ನು ಸಾಧಿಸಿದಾಗ ಸಾಧನೆಯಿಂದ ದೊರೆಯುವ ತೃಪ್ತಿ ನಮ್ಮ ಮುಂದಿನ ಕಾರ್ಯನಿರ್ವಹಣೆಯ ಮೇಲೆ ಪ್ರಭಾವ ಬೀರುತ್ತದೆ.
ಯುವಜನರು ಶಿಸ್ತುಬದ್ಧ ಜೀವನಶೈಲಿ ಮತ್ತು ಸಮಯದ ಸದ್ಬಳಕೆ ಮಾಡುವ ಮೂಲಕ ಮಾದರಿ ಜೀವನ ನಡೆಸಲು ಸಾಧ್ಯ ಎಂದರು.
ರಾಷ್ಟ್ರೀಯ ಸೇವಾ ಯೋಜನೆ ಯೋಜನಾಧಿಕಾರಿ ಡಾ. ಶೇಷಪ್ಪ ಸ್ವಾಗತಿಸಿದರು.
ರಾಷ್ಟ್ರೀಯ ಸೇವಾ ಯೋಜನೆ ಯೋಜನಾಧಿಕಾರಿಗಳಾದ ಪ್ರೊ. ಅರುಣಾ ಕುಮಾರಿ, ಪ್ರೊ. ತ್ರಿಶಾಂತ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಏಡ್ಸ್ ಬಗ್ಗೆ ಜಾಗೃತಿ ಮೂಡಿಸುವ ಪ್ರಶಸ್ತಿ ವಿಜೇತ ಕಿರುಚಿತ್ರಗಳನ್ನು ಪ್ರದರ್ಶಿಸಲಾಯಿತು.
ಏಡ್ಸ್ ನಿಯಂತ್ರಣ ಘಟಕ ಸಂಯೋಜಕ ಮಹೇಶ್ ವಂದಿಸಿದರು. ಚಿರಶ್ರೀ ಕಾರ್ಯಕ್ರಮ ನಿರೂಪಿಸಿದರು.