ಉಡುಪಿ: ಜಿಲ್ಲೆಯಲ್ಲಿನ ಗ್ರಾಮೀಣ ರಸ್ತೆ, ಜಿಲ್ಲಾ ರಸ್ತೆ, ಮೀನುಗಾರಿಕಾ ರಸ್ತೆ, ರಾಜ್ಯ ಹೆದ್ದಾರಿ, ರಾಷ್ಟ್ರೀಯ ಹೆದ್ದಾರಿಗಳನ್ನು ವಿಸ್ತರಿಸಿ, ಮೇಲ್ದರ್ಜೆಗೇರಿಸಲು ರೂಪಿಸಿರುವ ನಿಯಮಗಳಿಂದ ರಸ್ತೆ ಪಕ್ಕದಲ್ಲಿನ ಜನಸಾಮಾನ್ಯರಿಗೆ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳಲು ತೀವ್ರ ಸಮಸ್ಯೆಗಳಾಗುತ್ತಿದ್ದು, ಕೂಡಲೇ ಈ ನಿಯಮಗಳನ್ನು ಬದಲಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಲೋಕೋಪಯೋಗಿ ಸೇರಿದಂತೆ ವಿವಿಧ ರಸ್ತೆ ಕಾಮಗಾರಿ ಕೈಗೊಳ್ಳುವ ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಸೂಚನೆ ನೀಡಿದರು.
ಅವರು ಇಂದು ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ನಡೆದ, ಜಿಲ್ಲೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ಶಾಸಕರುಗಳಿಂದ ಅವರ ವ್ಯಾಪ್ತಿಯಲ್ಲಿ ಕೈಗೊಳ್ಳುತ್ತಿರುವ ರಸ್ತೆ ಅಗಲೀಕರಣ ಮತ್ತು ಮೇಲ್ದರ್ಜೆಗೇರಿಸುವ ಕಾಮಗಾರಿಗಳಿಂದ ತೊಂದರೆಗೆ ಒಳಗಾಗುವ ಯೋಜನೆಗಳ ಪಟ್ಟಿಯನ್ನು ಪಡೆದು, ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ನಿಯಮಗಳಲ್ಲಿ ಬದಲಾವಣೆ ತರುವ ಕುರಿತಂತೆ ಸರ್ಕಾರಕ್ಕೆ ಪತ್ರ ಬರೆಯುವಂತೆ ಸೂಚಿಸಿದ ಸಚಿವರು, ಈ ಪತ್ರದ ಕುರಿತಂತೆ ಬೆಂಗಳೂರಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಜಿಲ್ಲೆಯ ಸಾರ್ವಜನಿಕರಿಗೆ ಅನಾನುಕೂಲವಾಗದ ರೀತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿಗಳನ್ನು ಕೈಗೊಳ್ಳಲು ಹಾಗೂ ಅಗತ್ಯವಿದ್ದಲ್ಲಿ ಮೇಲ್ದರ್ಜೆಗೇರಿಸಲು ನಿರ್ಧರಿಸಿರುವ ರಸ್ತೆಗಳನ್ನು ಕೆಳದರ್ಜೆಗೆ ಇಳಿಸಲು ಅನುಮತಿ ದೊರಕಿಸಲಾಗುವುದು ಎಂದರು.
ರಸ್ತೆಗಳನ್ನು ಮೇಲ್ದರ್ಜೆಗೇರಿಸುವ ಸಂದರ್ಭದಲ್ಲಿ ಅವೈಜ್ಞಾನಿಕವಾಗಿ ಮತ್ತು ಕಾನೂನುಗಳನ್ನು ಸರಿಯಾಗಿ ಅರ್ಥೈಸಿಕೊಳ್ಳದೇ ಯೋಜನೆಗಳನ್ನು ಅನುಷ್ಠಾನ ಮಾಡುವ ಅಧಿಕಾರಿಗಳ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಇದರಿಂದಾಗಿ ಸಂಬಂಧಪಟ್ಟ ನಗರಸಭೆ, ಗ್ರಾಮ ಪಂಚಾಯತ್, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಟ್ಟಡ ನಿರ್ಮಾಣ ಮತ್ತಿತರ ಚಟುವಟಿಕೆಗಳಿಗೆ ಅನುಮತಿ ದೊರೆಯದೇ ಸಾರ್ವಜನಿಕರು ತೊಂದರೆಗೀಡಾಗುತ್ತಿದ್ದು, ಎಲ್ಲಾ ರಸ್ತೆ ನಿರ್ಮಾಣ ಇಲಾಖೆಗಳು ಏಕರೂಪದ ನಿಯಮಗಳನ್ನು ಅನುಷ್ಠಾನ ಮಾಡುವಂತೆ ಹಾಗೂ ಈ ಬಗೆಗಿನ ಆದೇಶಗಳನ್ನು ಸಂಬಂಧಪಟ್ಟ ವ್ಯಾಪ್ತಿಯ ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ನೀಡುವಂತೆ ಸೂಚನೆ ನೀಡಿದರು.
ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮಾತನಾಡಿ, ಕುಂದಾಪುರ ವಿಧಾನಸಭಾ ವ್ಯಾಪ್ತಿಯಲ್ಲಿ ಬಸ್ಗಳು ಓಡಾಡದ ರಸ್ತೆಯನ್ನು ಮೇಲ್ದರ್ಜೆಗೇರಿಸಲು ನಿಯಮಗಳನ್ನು ಅನುಸರಿಸುತ್ತಿದ್ದು, ಸಾರ್ವಜನಿಕರು ಈ ಬಗ್ಗೆ ಹಲವು ದೂರುಗಳನ್ನು ಸಲ್ಲಿಸಿದ್ದು, ಇದು ಇಡೀ ಜಿಲ್ಲೆಯಲ್ಲಿ ನಡೆಯುತ್ತಿದೆ ಎಂದರು.
ಉಡುಪಿ ಶಾಸಕ ಕೆ.ರಘುಪತಿ ಭಟ್ ಸಹ ತಮ್ಮ ವಿಧಾನಸಭಾ ವ್ಯಾಪ್ತಿಯಲ್ಲಿ ಇಂತಹ ಸಮಸ್ಯೆಗಳಿದ್ದು, ನಿಯಮಗಳ ವಿರುದ್ಧ ಗ್ರಾಮಸಭೆಗಳ ಮೂಲಕ ನಿರ್ಣಯ ಮಾಡಲಾಗಿದೆ. ಈ ಸಮಸ್ಯೆಯನ್ನು ಶೀಘ್ರದಲ್ಲಿ ಬಗೆಹರಿಸಬೇಕು ಎಂದರು.
ಜಿಲ್ಲೆಯಲ್ಲಿ ಸರಕಾರಿ ನಿರ್ಮಾಣ ಕಾಮಗಾರಿಗಳಿಗೆ ಕಾರ್ಯನಿರ್ವಹಿಸುತ್ತಿರುವ ವಾಹನಗಳ ಸಂಚಾರಕ್ಕೆ ಪೊಲೀಸ್, ಸಾರಿಗೆ ಮತ್ತು ಗಣಿ ಇಲಾಖೆ ಅಧಿಕಾರಿಗಳು ಯಾವುದೇ ರೀತಿಯ ಅಡಚಣೆ ಮಾಡದೇ, ಅವುಗಳ ಸುಗಮ ಓಡಾಟಕ್ಕೆ ಕ್ರಮ ಕೈಗೊಳ್ಳುವುದರ ಮೂಲಕ ಯೋಜನೆಗಳು ಶೀಘ್ರದಲ್ಲಿ ಪೂರ್ಣಗೊಳ್ಳಲು ಸಹಕರಿಸಬೇಕು ಎಂದರು.
ಜಿಲ್ಲೆಯ ಖನಿಜ ಪ್ರತಿಷ್ಠಾನ ನಿಧಿಯಲ್ಲಿನ ಮೊತ್ತವನ್ನು, ಗಣಿಗಾರಿಕೆ ನಡೆಯುತ್ತಿರುವ ಗ್ರಾಮಗಳ ವ್ಯಾಪ್ತಿಯಲ್ಲಿ ಗರಿಷ್ಠ ಸಂಖ್ಯೆಯ ಅಭಿವೃದ್ಧಿ ಕಾಮಗಾರಿಗಳಿಗೆ ಬಳಸುವಂತೆ ಸಚಿವರು ಸೂಚನೆ ನೀಡಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಎಸ್ಪಿ ವಿಷ್ಣುವರ್ಧನ್, ಡಿಎಫ್ಓ ಆಶೀಶ್ ರೆಡ್ಡಿ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು. ಅಪರ ಜಿಲ್ಲಾಧಿಕಾರಿ ವೀಣಾ ಸ್ವಾಗತಿಸಿ, ವಂದಿಸಿದರು.