ಉಡುಪಿ: ತಂಬಾಕು ಉತ್ಪನ್ನಗಳ ಸೇವನೆಯಿಂದ ಮಾರಣಾಂತಿಕ ಕಾಯಿಲೆಗಳಾದ ಕ್ಯಾನ್ಸರ್, ಹೃದಯ ರೋಗದಂತಹ ಕಾಯಿಲೆಗಳು ಬರುವ ಸಾಧ್ಯತೆ ಇರುವ ಹಿನ್ನೆಲೆ, ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸಿ, ಇವುಗಳಿಂದ ದೂರ ಉಳಿಯುವಂತೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ನಗರದ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹೆಚ್ಚಾಗಿ ಯುವಜನರು ತಂಬಾಕು ಉತ್ಪನ್ನಗಳ ಸೇವನೆ ಮಾಡುತ್ತಿರುವುದು ಕಂಡು ಬರುತ್ತಿದೆ. ಮಣಿಪಾಲ ಭಾಗದಲ್ಲಿ ಇವುಗಳ ಬಳಕೆ ಹಾಗೂ ಮಾರಾಟ ಹೆಚ್ಚಿದೆ. ಈ ಬಗ್ಗೆ ಹೆಚ್ಚು ಹೆಚ್ಚು ದಾಳಿಗಳನ್ನು ನಡೆಸುವುದರೊಂದಿಗೆ ಕೋಟ್ಪಾ ಕಾಯಿದೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದರು.
ತಂಬಾಕು ನಿಯಂತ್ರಣಕ್ಕೆ ವಿಶೇಷ ಅಭಿಯಾನಗಳನ್ನು ಹಾಗೂ ದಾಳಿಗಳನ್ನು ನಡೆಸಬೇಕು. ಶಾಲಾ-ಕಾಲೇಜುಗಳಲ್ಲಿ ಇವುಗಳ ಸೇವನೆಗಳಿಂದ ಉಂಟಾಗುವ ದುಷ್ಪರಿಣಾಮಗಳ ಅರಿವು ಮೂಡಿಸಿ, ಇವುಗಳಿಂದ ದೂರ ಇರುವಂತೆ ಮಾಡಬೇಕು ಎಂದರು.
ತಾಲೂಕು ಮಟ್ಟದಲ್ಲಿ ಕೋಟ್ಪಾ ತನಿಖಾ ದಾಳಿ ಹಾಗೂ ತ್ರೈಮಾಸಿಕ ಸಮನ್ವಯ ಸಮಿತಿ ಸಭೆಗಳನ್ನು ನಡೆಸುವುದರೊಂದಿಗೆ ಕೋಟ್ಪಾ ಕಾಯಿದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದರು.
ಶಾಲಾ-ಕಾಲೇಜುಗಳೂ ಸೇರಿದಂತೆ ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ನಿಷೇಧಿಸಬೇಕು. ಒಂದೊಮ್ಮೆ ಇದನ್ನು ಉಲ್ಲಂಘಿಸಿದ್ದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಡಬೇಕು ಎಂದರು.
ಉಡುಪಿ ತಾಲೂಕಿನ ಕೋಡಿಬೆಂಗ್ರೆ, ಕುಂದಾಪುರದ ಬೀಜೂರು ಗ್ರಾಮಗಳು ತಂಬಾಕು ಮುಕ್ತ ಗ್ರಾಮಗಳೆಂದು ತೋರಿಸಲು ಸರ್ವೇ ಕಾರ್ಯಗಳನ್ನು ಗ್ರಾಮ ಪಂಚಾಯತ್ ಮೂಲಕ ಮಾಡಿಸಿ ಘೋಷಿಸಬೇಕು ಎಂದರು.