ಉಡುಪಿ: ಉರ್ವ ಸ್ಟೋರ್ ಅಂಚೆ ಕಚೇರಿ ಬಳಿ ನಿರ್ಮಾಣಗೊಳ್ಳಲಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ನೂತನ ಪ್ರಧಾನ ಕಚೇರಿ ಸಂಕೀರ್ಣ ’ಮತ್ಸ್ಯ ಸಂಪದ’ ಶಿಲಾನ್ಯಾಸ ಸಮಾರಂಭ ಮೇ 20 ಶುಕ್ರವಾರ ಬೆಳಿಗ್ಗೆ 9.30ಕ್ಕೆ ನಡೆಯಲಿದೆ ಎಂದು ಫೆಡರೇಷನ್ ಅಧ್ಯಕ್ಷರಾದ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ.
ಶ್ರೀ ಪೇಜಾವರ ಅಧೋಕ್ಷಜ ಮಠದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಶಿಲಾನ್ಯಾಸ ನೆರವೇರಿಸಿ ಆಶೀರ್ವಚಿಸಲಿದ್ದು, ಫೆಡರೇಷನ್ ಅಧ್ಯಕ್ಷರಾದ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲು, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ| ಜಿ. ಶಂಕರ್, ರಾಜ್ಯ ಇಂಧನ ಸಚಿವರಾದ ವಿ. ಸುನೀಲ್ ಕುಮಾರ್, ಸಮಾಜ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕೆ ಸಚಿವರಾದ ಎಸ್.ಅಂಗಾರ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ| ಎಂ. ಎನ್. ರಾಜೇಂದ್ರ ಕುಮಾರ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಕಾಪು ಶಾಸಕರಾದ ಲಾಲಾಜಿ ಆರ್. ಮೆಂಡನ್, ಮಂಗಳೂರು ದಕ್ಷಿಣ ಶಾಸಕರಾದ ವೇದವ್ಯಾಸ ಕಾಮತ್, ಮಂಗಳೂರು ಉತ್ತರ ಶಾಸಕರಾದ ಡಾ| ವೈ. ಭರತ್ ಶೆಟ್ಟಿ, ಮೂಡಬಿದ್ರೆ ಶಾಸಕರಾದ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ ಸಿ. ಕುಂದರ್, ಕಾಂಚನ ಹ್ಯುಂಡೈ ಆಡಳಿತ ನಿರ್ದೇಶಕರಾದ ಪ್ರಸಾದ್‌ರಾಜ್ ಕಾಂಚನ್, ಉರ್ವ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರರಾದ ದೇವಾನಂದ ಗುರಿಕಾರ, ಮತ್ಸ್ಯೋದ್ಯಮಿಗಳಾದ ಆನಂದ ಪಿ. ಸುವರ್ಣ, ಮೋಹನ್ ಬೆಂಗ್ರೆ, ಶಶಿ ಕುಮಾರ್ (ಬಾಲು) ಭಾಗವಹಿಸಲಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೀನುಗಾರಿಕೆಯ ಸಮಗ್ರ ಅಭಿವೃದ್ಧಿಯ ಕನಸು ನನಸಾಗಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಪ್ರತ್ಯೇಕ ಮೀನುಗಾರಿಕಾ ಸಚಿವಾಲಯ ಆರಂಭಿಸಿ, ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ಮೂಲಕ ಮೀನುಗಾರರಿಗೆ ಶಕ್ತಿ ತುಂಬಿದ ಯೋಜನೆಯನ್ನು ಸ್ಮರಣೀಯವಾಗಿಸುವ ನಿಟ್ಟಿನಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಯ ಸುಸಂದರ್ಭದಲ್ಲಿ ನೂತನ ಪ್ರಧಾನ ಕಚೇರಿಗೆ ಮತ್ಸ್ಯ ಸಂಪದ ಹೆಸರಿಡಲು ನಿರ್ಧರಿಸಿದ್ದು, ಪ್ರಧಾನ ಕಚೇರಿ ಕಟ್ಟಡದಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ, ಮೀನುಗಾರ ಸಮುದಾಯ ಭವನವನ್ನೊಳಗೊಂಡ ಸುಸಜ್ಜಿತ ಆಡಳಿತ ಕಚೇರಿ ಕಾರ್ಯನಿರ್ವಹಿಸಲಿದೆ ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್‌ಪಾಲ್ ಸುವರ್ಣ ಹೇಳಿದ್ದಾರೆ.