ಬೆಂಗಳೂರು: ಮತಾಂತರ ನಿಷೇಧ ಕಾಯ್ದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ರಾಜ್ಯ ಸರಕಾರ ಸುಗ್ರೀವಾಜ್ಞೆಯ ಮೂಲಕ ಮತಾಂತರ ನಿಷೇಧ ಕಾಯ್ದೆಯನ್ನು ಸರ್ಕಾರ ಜಾರಿಗೊಳಿಸಿದೆ.
ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ರಾಜ್ಯಪಾಲರು ಅಂಕಿತ ಹಾಕಿದ ಹಿನ್ನೆಲೆಯಲ್ಲಿ ಮತಾಂತರ ನಿಷೇಧ ಕಾಯ್ದೆ ರಾಜ್ಯದಲ್ಲಿ ಅನುಷ್ಠಾನಕ್ಕೆ ಬಂದಿದೆ.
ಬಲವಂತವಾಗಿ, ವಂಚನೆ, ಒತ್ತಾಯಪೂರ್ವಕವಾಗಿ ಆಮಿಷದ ಮೂಲಕ ನಡೆಸುವ ಮತಾಂತರವನ್ನು ನಿಷೇಧಿಸಲಾಗಿದೆ. ಮತಾಂತರಗೊಂಡ ವ್ಯಕ್ತಿಯ ಪೋಷಕರು, ಸಹೋದರ, ಸಹೋದರಿಯರು, ಸಹವರ್ತಿ ಅಥವಾ ಸಹೋದ್ಯೋಗಿಗಳು ಮತಾಂತರದ ಬಗ್ಗೆ ದೂರು ನೀಡಿದಲ್ಲಿ ಎಫ್ಐಆರ್ ದಾಖಲಿಸಲಾಗುವುದು. ಬಲವಂತದ ಮತಾಂತರಕ್ಕೆ ಮೂರರಿಂದ ಐದು ವರ್ಷ ಜೈಲು ಶಿಕ್ಷೆ, 25 ಸಾವಿರ ರೂಪಾಯಿ ದಂಡ ವಿಧಿಸಲಾಗುವುದು.
ಮತಾಂತರ ಬಯಸುವ ವ್ಯಕ್ತಿ ಕನಿಷ್ಠ ಎರಡು ತಿಂಗಳ ಮೊದಲು ಜಿಲ್ಲಾಧಿಕಾರಿಗೆ ಈ ಬಗ್ಗೆ ತಿಳಿಸಬೇಕು. ಅಪ್ರಾಪ್ತ ವ್ಯಕ್ತಿ, ಮಹಿಳೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವ್ಯಕ್ತಿಯ ಬಲವಂತದ ಮತಾಂತರಕ್ಕೆ ಮೂರರಿಂದ ಹತ್ತು ವರ್ಷಗಳು ಜೈಲು ಶಿಕ್ಷೆ 50 ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ.