ಮಲ್ಪೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಇಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿದ್ಯಾರ್ಥಿ ಸ್ವಯಂ ಸೇವಕರಿಗೆ ಅಭಿವಿನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರಶಾಂತ ಎನ್. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಪ್ರಪಂಚದಲ್ಲಿಯೇ ಭಾರತದ ಯುವಜನತೆ ಪ್ರಮಾಣ ಹೆಚ್ಚಿದೆ, ಆದರೆ ಒಟ್ಟು ಅಪರಾಧ ಪ್ರಕರಣಗಳಲ್ಲಿಯೂ ಯುವ ಜನತೆಯ ಪಾಲು ಅಧಿಕವಾಗಿದೆ. ಯುವ ಸಂಪನ್ಮೂಲವನ್ನು ಸರಿಯಾದ ದಾರಿಯಲ್ಲಿ ನಡೆಸಲು ರಾಷ್ಟ್ರೀಯ ಸೇವಾ ಯೋಜನೆಗಳಠ ಪಠ್ಯಪೂರಕ ಚಟುವಟಿಕೆಗಳು ಸಹಾಯ ಮಾಡುತ್ತದೆ.
ಶಿಸ್ತು, ಸಹಬಾಳ್ವೆ ವ್ಯಕ್ತಿತ್ವ ವಿಕಸನ, ಕೌಶಲ್ಯ ಅಭಿವೃದ್ಧಿಗಳಂತಹ ಚಟುವಟಿಕೆಗಳು ರಾಷ್ಟ್ರೀಯ ಸೇವಾ ಯೋಜನೆಯಲ್ಲಿದ್ದು ಸಕ್ರಿಯವಾಗಿ ಭಾಗವಹಿಸಿದರೆ ವಿದ್ಯಾರ್ಥಿಯ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ್ ರೈ ಕೆ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆ ವಿಶಿಷ್ಟತೆಯನ್ನು ಹೊಂದಿದ್ದು, ವಿದ್ಯಾರ್ಥಿ ಸ್ವಯಂ ಸೇವಕರು ಶಿಸ್ತು, ಸನ್ನಡತೆ, ಸ್ವಚ್ಚತೆ, ಸಹಬಾಳ್ವೆಯನ್ನು ಮೈಗೂಡಿಸಿ ಕೊಂಡಿರುತ್ತಾರೆ. ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಐ.ಕ್ಯೂ.ಎ.ಸಿ. ಸಂಚಾಲಕರಾದ ಡಾ. ಮೇವಿ ಮಿರಾಂದ ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆ ಘಟಕ-೨ರ ಯೋಜನಾಧಿಕಾರಿ ಡಾ. ಮಹೇಶ್ ಕುಮಾರ್ ಕೆ. ಇ. ಪ್ರಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನೆ ಘಟಕ-೧ರ ಯೋಜನಾಧಿಕಾರಿ ಸುಷ್ಮಾ ಟಿ. ವಂದಿಸಿದರು. ವಿದ್ಯಾರ್ಥಿ ಪ್ರತಿನಿಧಿ ಸುಷ್ಮಾ ನಿರೂಪಿಸಿದರು.