ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ತನ್ನ ಅಭ್ಯರ್ಥಿಯಾಗಿ ಬುಡಕಟ್ಟು ನಾಯಕಿ ದ್ರೌಪದಿ ಮುರ್ಮು ಹೆಸರನ್ನು ಬಿಜೆಪಿ ನೇತೃತ್ವದ ಎನ್.ಡಿ.ಎ ಘೋಷಿಸಿದೆ. ತನ್ಮೂಲಕ ರಾಷ್ಟ್ರಪತಿ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರು ಕಣಕ್ಕೆ ಇಳಿಯಲಿದ್ದಾರೆ.
ಚುನಾವಣೆಯಲ್ಲಿ ಗೆದ್ದರೆ ರಾಷ್ಟ್ರಪತಿಯಾಗಿ ಆಯ್ಕೆಯಾದ ಭಾರತದ ಮೊದಲ ಬುಡಕಟ್ಟು ಮಹಿಳೆಯಾಗಲಿದ್ದಾರೆ. ದ್ರೌಪದಿ ಮುರ್ಮು 2015 ರಿಂದ 2021 ರವರೆಗೆ ಜಾರ್ಖಂಡ್ ರಾಜ್ಯದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.
ಬಿಜೆಡಿ-ಬಿಜೆಪಿ ಸಮ್ಮಿಶ್ರ ಸರಕಾರದಲ್ಲಿ ನವೀನ್ ಪಟ್ನಾಯಕ್ ಸಂಪುಟದಲ್ಲಿ ಸಚಿವರಾಗಿದ್ದ ಇವರು, ಒರಿಸ್ಸಾದಿಂದ ಎರಡು ಬಾರಿ ಶಾಸಕರಾಗಿದ್ದರು. 2013 ರಲ್ಲಿ ಬಿಜೆಪಿ ಎಸ್.ಟಿ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದರು.
ಜೂನ್ 20, 1958 ರಲ್ಲಿ ಒರಿಸ್ಸಾದಲ್ಲಿ ಜನಿಸಿದ ಇವರು, ಭುವನೇಶ್ವರದ ರಮಾದೇವಿ ಮಹಿಳಾ ಕಾಲೇಜಿನಲ್ಲಿ ಬಿಎ ಪದವಿ ಶಿಕ್ಷಣ ಪಡೆದ ಇವರು ಎರಡು ದಶಕಗಳ ಕಾಲ ಸಮಾಜಸೇವೆಯಲ್ಲಿ ಅದರಲ್ಲೂ ಬುಡಕಟ್ಟು ಕಲ್ಯಾಣಕ್ಕಾಗಿ ಸೇವೆ ಸಲ್ಲಿಸಿದರು.