ಉಡುಪಿ: 80 ಬಡಗಬೆಟ್ಟು ಗ್ರಾಮ ಪಂಚಾಯತ್ ಕಟ್ಟಡದಲ್ಲಿ, ಜಿಲ್ಲಾ ಪಂಚಾಯತ್ ಉಡುಪಿ, ವನಧನ ವಿಕಾಸ ಕೇಂದ್ರ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ತಾಲೂಕು ಪಂಚಾಯತ್ ಉಡುಪಿ, 80 ಬಡಗಬೆಟ್ಟು ಗ್ರಾಮ ಪಂಚಾಯತ್ ಹಾಗೂ ನೇಸರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಇವರ ಸಹಯೋಗದೊಂದಿಗೆ ಶ್ರೀ ದೇವಿ ಸಂಜೀವಿನಿ ಸ್ವ ಸಹಾಯ ಸಂಘದ ಮಹಿಳೆಯರು ಪ್ರಾರಂಭಿಸಿರುವ ಶ್ರೀ ದೇವಿ ಸಂಜೀವಿನಿ ಚಿಕ್ಕಿ ತಯಾರಿಕಾ ಘಟಕವನ್ನು ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್. ಮೆಂಡನ್ ಇವರು ಇಂದು ಉದ್ಘಾಟಿಸಿದರು.
ಪ್ರಾಯೋಗಿಕವಾಗಿ ತಯಾರಿಸಿರುವ ಚಿಕ್ಕಿಗಳನ್ನು ಜಿಲ್ಲೆಯ ಅಂಗನವಾಡಿಗಳಿಗೆ ಸರಬರಾಜು ಮಾಡಲು 10 ಕೆ.ಜಿ. ಚಿಕ್ಕಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರಿಗೆ ಹಸ್ತಾಂತರಿಸಲಾಯಿತು. ನಂತರ ಮಾತನಾಡಿದ ಅವರು, ಸಂಜೀವಿನಿ ಸ್ವ ಸಹಾಯ ಸಂಘದ ಮಹಿಳೆಯರು ಇಂತಹ ಉದ್ದಿಮೆಗಳನ್ನು ಪ್ರಾರಂಭಿಸುವ ಮೂಲಕ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಮುನ್ನಡೆಗೆ ಬರುವುದಾಗಿ ಮೆಚ್ಚುಗೆ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಧವಿ ಆಚಾರ್ಯ, ಉಪಾಧ್ಯಕ್ಷರಾದ ನಿರುಪಮಾ ಹೆಗ್ಡೆ, ಸದಸ್ಯರಾದ ಶುಭಕರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಉಪೇಂದ್ರ ನಾಯಕ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ, ಶ್ರೀನಿವಾಸ್ ರಾವ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ವೀಣಾ ವಿವೇಕಾನಂದ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಅಶೋಕ್ ಕುಮಾರ್, ಜಿಲ್ಲಾ ಪಂಚಾಯತ್ ಎನ್.ಆರ್.ಎಲ್.ಎಂ. ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಪ್ರಭಾಕರ್ ಆಚಾರ್, ಜಿಲ್ಲಾ ವ್ಯವಸ್ಥಾಪಕರಾದ ಅವಿನಾಶ್, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಕೃಷ್ಣ, ಯುವ ವೃತ್ತಿಪರ ಸಮಂತ್ ಶೆಟ್ಟಿ, ನೇಸರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಅಧ್ಯಕ್ಷರಾದ ಮಾಲತಿ ನಾಯ್ಕ್ ಮುಂತಾದವರು ಉಪಸ್ಥಿತರಿದ್ದರು.