ಕೋಟ: ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.)ಕೋಟದ ಸಹಭಾಗಿತ್ವದಲ್ಲಿ ಕಳೆದ ಹದಿನೇಳು ವರುಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರ ನೀಡುತ್ತಾ ಬಂದಿದೆ.
ಈಗಾಗಲೇ ವೀರಪ್ಪ ಮೊಯ್ಲಿ, ವೆಂಕಟಾಚಲ, ಕೆ.ರಾಮಕೃಷ್ಣ ಹಂದೆ, ರವಿ ಬೆಳಗೆರೆ, ಗಿರೀಶ ಕಾಸರವಳ್ಳಿ, ಜಯಶ್ರೀ, ಮೋಹನ ಆಳ್ವ, ಸಾಲು ಮರದ ತಿಮ್ಮಕ್ಕ, ಚಿಟ್ಟಾಣಿ ರಾಮಚಂದ್ರ ಹೆಗಡೆ, ಜಯಂತ ಕಾಯ್ಕಿಣಿ, ಸದಾನಂದ ಸುವರ್ಣ, ಡಾ. ಬಿ. ಎಂ ಹೆಗ್ಡೆ, ಪ್ರಕಾಶ್ ರೈ, ಶ್ರೀಪಡ್ರೆ, ಕವಿತಾ ಮಿಶ್ರ, ನಾಡೋಜ ಡಾ.ಎಸ್.ಎಲ್.ಭೈರಪ್ಪ, ಗಿರೀಶ್ ಭಾರದ್ವಜ್ ಅವರಿಗೆ ಪ್ರದಾನ ಮಾಡಲಾಗಿರುತ್ತದೆ.
ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ 2022ರ ಸಾಲಿನಲ್ಲಿ ಹಲವು ದಶಕಗಳಿಂದ ಚಲನಚಿತ್ರ ಹಾಗೂ ಸಾಮಾಜಿಕ ಮಾಧ್ಯಮ ಕ್ಷೇತ್ರದಲ್ಲಿ ನಟ, ನಿರ್ದೇಶಕ, ನಿರೂಪಕ, ವ್ಯಕ್ತಿತ್ವ ವಿಕಸನ ಸಂಪನ್ಮೂಲ ವ್ಯಕ್ತಿಯಾಗಿ ರಾಷ್ಟ್ರಮಟ್ಟದಲ್ಲಿ ಸಾಧನೆಗೈದು ಕೀರ್ತಿ ಗಳಿಸಿದ ಡಾ. ರಮೇಶ್ ಅರವಿಂದ್ ಅವರ ಸರಳ, ಸವ್ಯಸಾಚಿ ವ್ಯಕ್ತಿತ್ವ, ಸಾಧನೆ ಪರಿಗಣಿಸಿ ಈ ವರ್ಷ ಅವರನ್ನು ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಅಕ್ಟೋಬರ್ ಹತ್ತರಂದು ಡಾ. ಕೋಟ ಶಿವರಾಮ ಕಾರಂತರ ಜನ್ಮ ದಿನ ಡಾ. ಕಾರಂತ ಹುಟ್ಟೂರ ಪ್ರಶಸ್ತಿಯನ್ನು ಇವರಿಗೆ ಪ್ರದಾನ ಮಾಡಲಾಗುತ್ತದೆ ಎಂದು ಡಾ. ಶಿವರಾಮ ಕಾರಂತ ಪ್ರತಿಷ್ಠಾನ (ರಿ)ಕೋಟದ ಕಾರ್ಯಾಧ್ಯಕ್ಷ ಆನಂದ ಸಿ ಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಆಯ್ಕೆ ಸಮಿತಿ ಸದಸ್ಯ ಯು.ಎಸ್ ಶೆಣೈ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಾಸು ಪೂಜಾರಿ, ಪಿ.ಡಿ.ಓ ಜಯರಾಮ್ ಶೆಟ್ಟಿ, ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಉಪಸ್ಥಿತರಿದ್ದರು.