ಕಾರ್ಕಳ: ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನವನ್ನು ಆಚರಿಸಲಾಯಿತು. ಕಾರ್ಕಳ ತಾಲೂಕು ಪಂಚಾಯತ್ ಮಾಜಿ ಸದಸ್ಯ ಅಶೋಕ್ ಶೆಟ್ಟಿ, ಕಾರ್ಕಳ ತಾಲೂಕು ಛಾಯಾಚಿತ್ರಗ್ರಾಹಕರ ಸಂಘದ ಮಾಜಿ ಅಧ್ಯಕ್ಷ ಪ್ರಸಾದ್ ಐಸಿರ, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರಸಾದ್ ಐಸಿರ, ಎನ್ನೆಸ್ಸೆಸ್ನಲ್ಲಿ ಸಿಗುವ ಪ್ರತಿ ಅವಕಾಶವನ್ನು ಸದುಪಯೋಗಪಡಿಸಿಕೊಂಡು ನಾಯಕತ್ವ ಹಾಗೂ ಸೇವಾ ಮನೋಭಾವನೆ ಬೆಳೆಸಿಕೊಳ್ಳಿ ಎಂದರು. ಅಶೋಕ್ ಶೆಟ್ಟಿ ಮಾತನಾಡಿ, ಯಾವುದೇ ಜವಾಬ್ದಾರಿ ನಿಭಾಯಿಸುವ ಗುಣ ನಾಯಕನಾಗುವವನಿಗೆ ಅಗತ್ಯವಾಗಿದ್ದು, ಎನ್ನೆಸ್ಸೆಸ್ ಅಂತಹ ಹಲವು ಅವಕಾಶಗಳನ್ನು ಕೊಟ್ಟು ವ್ಯಕ್ತಿತ್ವ ರೂಪಿಸುತ್ತದೆ ಎಂದರು.
ಎನ್ನೆಸ್ಸೆಸ್ ದಿನದ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ವಿತರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ದಿನೇಶ್ ಎಂ ಕೊಡವೂರು ಅಧ್ಯಕ್ಷತೆ ವಹಿಸಿದ್ದರು. ಎನ್.ಎಸ್.ಎಸ್ ವಿದ್ಯಾರ್ಥಿ ನೇತಾರರಾದ ಪ್ರಸನ್ನ ಹಾಗೂ ಸ್ವಾತಿ ವೇದಿಕೆಯಲ್ಲಿದ್ದರು.
ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ರವಿ ಜಿ ಸ್ವಾಗತಿಸಿ, ವಿದ್ಯಾರ್ಥಿನಿಯರಾದ ಸ್ವಾತಿ ವಂದಿಸಿದರು. ಶರಣ್ಯ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.