ಉಡುಪಿ: ಮಹಾತ್ಮ ಗಾಂಧೀಜಿ ಅವರು ತಾವು ನೀಡಿದ ಸಂದೇಶಳಿಗೆ ಅನುಗುಣವಾಗಿ ಜೀವನ ನಡೆಸಿ, ಎಲ್ಲರಿಗೂ ಮಾದರಿಯಾಗಿದ್ದು, ಅಹಿಂಸೆ ಮೂಲಕ ಜಗತ್ತನ್ನೇ ಗೆಲ್ಲಬಹುದು ಎಂಬುದನ್ನು ಸಾರಿದ್ದರು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಇಂದು ಅಜ್ಜರಕಾಡು ಭುಜಂಗಪಾರ್ಕ್ ನಲ್ಲಿ ನಡೆದ ಗಾಂಧೀ ಜಯಂತಿ ಕಾರ್ಯಕ್ರಮದಲ್ಲಿ ಗಾಂಧೀ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.
ಮಹಾತ್ಮ ಗಾಂಧೀಜಿ ಅವರು ಜಗತ್ತಿಗೆ ಶಾಂತಿ ಮಂತ್ರವನ್ನು ಭೋಧಿಸಿದ್ದು, ಅಸ್ಪ್ರಶ್ಯತೆ ಕುರಿತು ವಿರೋಧ ಹೊಂದಿದ್ದರು. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಇನ್ನೂ ಹಲವೆಡೆ ಅಸ್ಪ್ರಶ್ಯತೆ ಕಂಡು ಬರುತ್ತಿರುವುದು ವಿಪರ್ಯಾಸ ಎಂದ ಸಚಿವರು ಗಾಂಧೀಜಿಯವರ ಆಶಯದಂತೆ ಎಲ್ಲೆಡೆ ಸಮಾನತೆಯ ಅನುಷ್ಠಾನವಾಗಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ. ರಘುಪತಿ ಭಟ್ ಮಾತನಾಡಿ, ಉಡುಪಿ ಜಿಲ್ಲೆಯ ರಜತ ಮಹೋತ್ಸವದ ಸಂದರ್ಭದಲ್ಲಿ ಉಡುಪಿಯಲ್ಲಿ 3 ಕೋಟಿ ರೂ ವೆಚ್ಚದಲ್ಲಿ ಗಾಂಧೀ ಭವನ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಿದ್ದು, ಜಿಲ್ಲೆಯಲ್ಲಿ 50 ಕಿಮೀ ಒಳಗೆ ದೊರೆಯುವ ನೈಸರ್ಗಿಕ ವಸ್ತುಗಳನ್ನೇ ಬಳಸಿ ಅತ್ಯಂತ ಆಕರ್ಷಕವಾಗಿ ಪರಿಸರ ಸ್ನೇಹಿಯಾಗಿ ಗಾಂಧೀ ಭವನ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳುತ್ತಿದ್ದು, ಒಂದು ವರ್ಷದ ಒಳಗೆ ಕಾಮಗಾರಿ ಮುಕ್ತಾಯಗೊಳ್ಳಲಿದೆ ಎಂದರು.
ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಗಾಂಧೀಜಿ ಅವರ ವಿಚಾರಧಾರೆಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಅಗತ್ಯವಿದೆ, ಗಾಂಧೀ ವಿಚಾರಧಾರೆಗಳ ಒಂದು ದಿನಕ್ಕೆ ಮಾತ್ರ ಸೀಮಿತವಾಗದೇ ನಿರಂತರವಾಗಿ ಸಾರ್ವಜನಿಕರಿಗೆ ತಲುಪಬೇಕು ಎಂದರು.
ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಸ್ವಚ್ಛತೆಗೆ ಆದ್ಯತೆ ನೀಡಿದ್ದ ಗಾಂಧೀಜಿ ಅವರ ಚಿಂತನೆಯ ಹಾದಿಯಲ್ಲಿ ಪ್ರಧಾನ ಮಂತ್ರಿಯವರ ಸ್ವಚ್ಛ ಭಾರತ್ ಯೋಜನೆಯ ಕಾರ್ಯಕ್ರಮಗಳನ್ನು ಉಡುಪಿ ನಗರಸಭೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದು, ಇತ್ತೀಚೆಗೆ ಉಡುಪಿ ನಗರಸಭೆಗೆ ರಾಜ್ಯ ಪ್ರಶಸ್ತಿ ಕೂಡಾ ದೊರೆತಿದೆ. ಅಕ್ಟೋಬರ್ ತಿಂಗಳಲ್ಲಿ ಜಿಲ್ಲೆಯಲ್ಲಿ ಕ್ಲೀನ್ ಇಂಡಿಯಾ ಮತ್ತು ಫಿಟ್ ಇಂಡಿಯಾ ಕಾರ್ಯಕ್ರಮಗಳು ನಡೆಯಲಿದ್ದು ಜಿಲ್ಲೆಯ ಸಾರ್ವಜನಿಕರೂ ಇದರಲ್ಲಿ ಪಾಲ್ಗೊಂಡು ಎಲ್ಲಾ ರೀತಿಯ ಸಹಕರ ನೀಡುವಂತೆ ತಿಳಿಸಿದರು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಕೆ ಉದಯ್ ಕುಮಾರ್ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷೆ ಲಕ್ಷ್ಮಿ ಮಂಜುನಾಥ್ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ, ಪೌರಾಯುಕ್ತ ಉದಯ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಕ್ಲೀನ್ ಇಂಡಿಯಾ ಕಾರ್ಯಕ್ರಮ ಕುರಿತ ಪೋಸ್ಟರ್ ಬಿಡುಗಡೆ ಹಾಗೂ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.