ನವದೆಹಲಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17 ರಂದು ನಡೆದ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ತನ್ಮೂಲಕ ಕಳೆದ ೨೨ ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಮನೆತನದ ಹೊರತಾದ ವ್ಯಕ್ತಿಯೊಬ್ಬರಿಗೆ ಕಾಂಗ್ರೆಸ್ ಅಧ್ಯಕ್ಷ ಪಟ್ಟ ಸಿಕ್ಕಿದೆ. ಖರ್ಗೆಯವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನ ವಹಿಸಿದ ಕರ್ನಾಟಕದ ಎರಡನೇ ವ್ಯಕ್ತಿಯಾಗಿದ್ದಾರೆ.
ಒಟ್ಟು ಎಣಿಕೆಯಾದ ಮತಗಳು 9,385 ಆಗಿದ್ದು, ಅದರಲ್ಲಿ ಮಲ್ಲಿಕಾರ್ಜುನ ಖರ್ಗೆ 7,897 ಮತಗಳು ಲಭಿಸಿದರೆ, ಶಶಿ ತರೂರ್ 1,072 ಮತಗಳನ್ನು ಪಡೆದಿದ್ದಾರೆ. 416 ಮತಗಳು ಅಸಿಂಧು ಎಂದು ಕಾಂಗ್ರೆಸ್ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಹೇಳಿದರು.
ಪ್ರಧಾನಿ ಮೋದಿ ಅಭಿನಂದನೆ: ಎಐಸಿಸಿಯ ನೂತಕ ಅಧ್ಯಕ್ಷರಾಗಿ ಚುನಾಯಿತರಾದ ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಅಭಿನಂದಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಹೊಸ ಜವಾಬ್ದಾರಿ ವಹಿಸಿಕೊಂಡ ಮಲ್ಲಿಕಾರ್ಜುನ ಖರ್ಗೆಯವರಿಗೆ ನನ್ನ ಶುಭಾಶಯಗಳು. ಅವರ ಅಧಿಕಾರಾವಧಿ ಫಲಪ್ರದವಾಗಿರಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.