ಉಡುಪಿ, ಫೆ. 5: ಜಿಲ್ಲಾ ಪಂಚಾಯತ್ ಉಡುಪಿ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ – ಸಂಜೀವನಿ ಇವರ ಆಶ್ರಯದಲ್ಲಿ ಉಡುಪಿಯ ಬನ್ನಂಜೆ ಬಾಲಭವನ ಆವರಣದಲ್ಲಿ ಸಂಜೀವಿನಿ ಸಂತೆ ನಡೆಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಸಂತೆಗೆ ಭೇಟಿ ನೀಡಿ ಉತ್ಪನ್ನಗಳನ್ನು ಖರೀದಿಸಿದರು.
ಸಂಜೀವಿನಿ ಸ್ವಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸಿರುವ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಬಾಲಭವನ ಅಭಿವೃದ್ಧಿ ಅನುದಾನದಲ್ಲಿ ಮಾರುಕಟ್ಟೆಗೆ ಅನುಕೂಲ ಆಗುವ ನಿಟ್ಟಿನಲ್ಲಿ ಸುಸಜ್ಜಿತ ಮೇಲ್ಚಾವಣಿಯನ್ನು ನಿರ್ಮಿಸಿ ಕೊಡುವ ಮೂಲಕ ಸಂಜೀವಿನಿ ಗುಂಪಿನ ಮಹಿಳೆಯರಿಗೆ ನೆರವನ್ನು ನೀಡಲಾಗಿದೆ.
ಪ್ರತೀ ಭಾನುವಾರ ನಡೆಯುವ ಸಂಜೀವಿನಿ ಸಂತೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸಾರ್ವಜನಿಕರು ಆಗಮಿಸಿ ಖರೀದಿಸುವ ಮೂಲಕ ಪ್ರೋತ್ಸಾಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಹೇಳಿದರು. ಜಿಲ್ಲಾ ಪಂಚಾಯತ್ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್ ಉಪಸ್ಥಿತರಿದ್ದರು.