ಉಡುಪಿ, ಫೆ. 8: ಗ್ರಾಮ ಪಂಚಾಯತ್ ಉಪ ಚುನಾವಣೆ -2023 ಕ್ಕೆ ಸಂಬಂಧಿಸಿದಂತೆ, ಅವಧಿ ಮುಕ್ತಾಯವಾಗುವ ಗ್ರಾಮ ಪಂಚಾಯತ್‌ಗಳ ಸದಸ್ಯ ಸ್ಥಾನಗಳಿಗೆ ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ ಹಾಗೂ ಖಾಲಿ ಉಳಿದಿರುವ ಗ್ರಾಮ ಪಂಚಾಯತ್‌ಗಳ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿದೆ.
ಜಿಲ್ಲೆಯ ಬ್ರಹ್ಮಾವರ ತಾಲೂಕು ಹಾವಂಜೆ ಗ್ರಾಮ ಪಂಚಾಯತ್ ಹಾಗೂ ಕುಂದಾಪುರ ತಾಲೂಕು ಕುಂಭಾಶಿ ಗ್ರಾಮ ಪಂಚಾಯತ್‌ನ ತಲಾ ಒಂದು ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದ್ದು, ನಾಮಪತ್ರಗಳನ್ನು ಸಲ್ಲಿಸಲು ಫೆಬ್ರವರಿ 14 ಕೊನೆಯ ದಿನ. ಫೆ. 15 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಫೆ. 17 ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ.
ಫೆ. 25 ರ ಶನಿವಾರ ಬೆಳಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅವಶ್ಯವಿದ್ದಲ್ಲಿ ಮರು ಮತದಾನ ಫೆ. 27 ರಂದು ನಡೆಯಲಿದೆ. ಫೆ. 28 ರಂದು ಬೆಳಗ್ಗೆ 8 ರಿಂದ ತಾಲೂಕು ಕೇಂದ್ರಗಳಲ್ಲಿ ಮತಗಳ ಎಣಿಕೆ ನಡೆಯಲಿದೆ. ಚುನಾವಣೆ ನಡೆಯುವ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಫೆ. 8 ರಿಂದ ಫೆ. 28 ರ ವರೆಗೆ ಚುನಾವಣಾ ನೀತಿ ಸಂಹಿತೆಯು ಜಾರಿಯಲ್ಲಿರಲಿದೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.