Wednesday, November 13, 2024
Wednesday, November 13, 2024

ಉಡುಪಿ ಜಿಲ್ಲಾ ವ್ಯಾಪ್ತಿಯ ಮತಗಟ್ಟೆಗಳ ಸುತ್ತ ಪ್ರತಿಬಂಧಕಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಆದೇಶ

ಉಡುಪಿ ಜಿಲ್ಲಾ ವ್ಯಾಪ್ತಿಯ ಮತಗಟ್ಟೆಗಳ ಸುತ್ತ ಪ್ರತಿಬಂಧಕಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಆದೇಶ

Date:

ಉಡುಪಿ, ಏ. 25: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಮೇ 10 ರಂದು ಮತದಾನ ನಡೆಯುವ ಹಿನ್ನೆಲೆ, ಮೇ 8 ರಂದು ಸಂಜೆ 6 ಗಂಟೆಯಿಂದ ಮೇ 10 ರಂದು ಮತದಾನ ಮುಕ್ತಾಯವಾಗುವವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿರುವ ಮತಗಟ್ಟೆಗಳ ಸುತ್ತಲೂ 200 ಮೀ. ಆವರಣವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ, ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರಡಿ ಈ ಕೆಳಗಿನಂತೆ ಷರತ್ತುಗಳನ್ನು ವಿಧಿಸಿ, ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.

ಜಿಲ್ಲಾ ವ್ಯಾಪ್ತಿಯಲ್ಲಿ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಲಾಗಿದೆ. ಚುನಾವಣೆಗೆ ಸಂಬಂಧಿಸಿದಂತೆ ಮತದಾನದ ದಿನದ ಹಿಂದಿನ 48 ಗಂಟೆಗಳ ಅವಧಿಯಲ್ಲಿ ಮನೆ-ಮನೆ ಪ್ರಚಾರಕ್ಕೆ ಸಂಬಂಧಿಸಿದಂತೆ ಮನೆ-ಮನೆಗೆ ಭೇಟಿ ನೀಡುವುದನ್ನು ನಿರ್ಬಂಧಿಸಿರುವುದಿಲ್ಲ. ಶಸ್ತ್ರ, ಬಡಿಗೆ ಬರ್ಚಿ, ಖಡ್ಗ, ಗದೆ, ಬಂದೂಕು, ಊರಿ, ಲಾಠಿ, ದೊಣ್ಣೆ, ಚಾಕು ಹಾಗೂ ದೇಹಕ್ಕೆ ಅಪಾಯವನ್ನು ಉಂಟು ಮಾಡುವ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದು ಹಾಗೂ ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.

ಮತಗಟ್ಟೆಗಳ 100 ಮೀ. ವ್ಯಾಪ್ತಿಯೊಳಗೆ ಚುನಾವಣಾ ಪ್ರಚಾರವನ್ನು ನಿಷೇಧಿಸಲಾಗಿದ್ದು, ಈ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಬುಕ್‌ಸ್ಟಾಲ್, ಸೈಬರ್ ಕೆಫೆಗಳನ್ನು ನಿರ್ಬಂಧಿಸಲಾಗಿದೆ. ಕಲ್ಲುಗಳನ್ನು, ಕ್ವಾರ ಪಾದಾರ್ಥ ಇಲ್ಲವೆ ಸ್ಪೋಟಕ ವಸ್ತುಗಳು ಇತ್ಯಾದಿಗಳನ್ನು ಮತಗಟ್ಟೆಗಳ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಕಲ್ಲುಗಳನ್ನು ಮತ್ತು ಎಸೆಯುವಂತಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಹಾಗೂ ಪ್ರತಿಮೆಗಳ ಪ್ರದರ್ಶನ ಹಾಗೂ ದಹನ ಮಾಡುವುದನ್ನು ನಿರ್ಬಂಧಿಸಲಾಗಿದೆ.

ಸದರಿ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.

ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿರುವುದು ಕಂಡು ಬಂದಲ್ಲಿ, ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂತಹ ವಸ್ತುಗಳನ್ನು ಸರಕಾರವು ಮುಟ್ಟುಗೋಲು ಹಾಕಿಕೊಂಡು, ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗುವುದು.

ಶವ ಸಂಸ್ಕಾರ, ಮದುವೆ, ಧಾರ್ಮಿಕ ಮೆರವಣಿಗೆ ಹಾಗೂ ಕೋವಿಡ್-19 ಕಾರ್ಯಗಳಿಗೆ ಈ ಆಜ್ಞೆಯು ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ಹಾಗೂ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು.

ಚುನಾವಣಾ ಕಾರ್ಯದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಅಥವಾ ಚುನಾವಣಾಧಿಕಾರಿ ಅವರಿಂದ ಅನುಮತಿ ಪಡೆದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಹೊರತುಪಡಿಸಿ, ಮತಗಟ್ಟೆಗಳ ಸುತ್ತ 100 ಮೀ. ಅಂತರದಲ್ಲಿ ಮೊಬೈಲ್ ಫೋನ್, ಕಾರ್ಡ್ಲೆಸ್ ಪೋನ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಮತಗಟ್ಟೆಗಳ ಸುತ್ತ 100 ಮೀ. ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್, ಬ್ಯಾನರ್ ಇನ್ಯಾವುದೇ ವಸ್ತುಗಳನ್ನು ಹಾಗೂ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ.

ಕಲ್ಯಾಣ ಮಂಟಪ, ಸಮುದಾಯ ಭವನ, ಹೋಟೆಲ್ ಮತ್ತು ಅತಿಥಿಗೃಹಗಳಲ್ಲಿ ವಾಸ್ತವ್ಯ ಹೂಡಿದವರ ಪಟ್ಟಿಗಳ ಪರಿಶೀಲನೆ ನಡೆಸಿ, ಮತದಾರರಲ್ಲದವರನ್ನು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಕಳುಹಿಸಲು ಕ್ರಮ ವಹಿಸುವಂತೆ ಹಾಗೂ ಈ ಮೇಲ್ಕಂಡ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ 188 ರ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು. ಈ ಆದೇಶವು ಮತದಾನ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ, ಪೊಲೀಸ್ ಅಧಿಕಾರಿಗಳಿಗೆ, ಚುನಾವಣಾ ಕಾರ್ಯನಿರತ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಹಾಗೂ ಒಬ್ಬೊಬ್ಬರಾಗಿ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗ್ರಾಮ ಪಂಚಾಯತ್ ಕಾರ್ಯಪಡೆ ಸದಸ್ಯರಿಗೆ ಗ್ರಾಮ ಆರೋಗ್ಯ ತರಬೇತಿ ಕಾರ್ಯಗಾರ

ಉಡುಪಿ, ನ.13: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಗ್ರಾಮ ಪಂಚಾಯತ್ ಉಪಚುನಾವಣೆ: ಸಂತೆ, ಜಾತ್ರೆ ನಿಷೇಧ

ಉಡುಪಿ, ನ.13: ಜಿಲ್ಲೆಯ ಉಡುಪಿ ತಾಲೂಕಿನ ಬೊಮ್ಮಾರಬೆಟ್ಟು ಹಾಗೂ 13-ಕೊಡಿಬೆಟ್ಟು, ಕುಂದಾಪುರ...

ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರ ಪ್ರಾರಂಭಿಸಲು ಅರ್ಜಿ ಆಹ್ವಾನ

ಉಡುಪಿ, ನ.13: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ...

ಕಾರ್ಮಿಕರಿಗೆ ಲಭ್ಯವಿರುವ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ನ.12: ಕಾರ್ಮಿಕರ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಲವಾರು...
error: Content is protected !!