ಬೆಂಗಳೂರು, ಮೇ 17: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಮತ್ತು ಅಭೂತಪೂರ್ವ ಗೆಲುವಿನೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿರುವ ಕಾಂಗ್ರೆಸ್ ಗೆ ಸದ್ಯಕ್ಕೆ ಮುಖ್ಯಮಂತ್ರಿ ಆಯ್ಕೆಯು ಕಗ್ಗಂಟಾಗಿ ಉಳಿದಿದೆ. ಬುಧವಾರ ಮಧ್ಯಾಹ್ನ ಸಿದ್ಧರಾಮಯ್ಯನವರು ಮುಂದಿನ ಸಿಎಂ ಎಂಬ ಸುದ್ಧಿ ಎಲ್ಲೆಡೆ ಹರಡಿತ್ತು. ಪ್ರಮಾಣವಚನ ಸಮಾರಂಭಕ್ಕಾಗಿ ಕಂಠೀರವ ಸ್ಟೇಡಿಯಂನಲ್ಲಿ ತಯಾರಿ ನಡೆಸಲಾಗುತ್ತಿತ್ತು. ಇದಲ್ಲದೆ ಸಿದ್ಧರಾಮಯ್ಯನವರ ವರುಣಾ ಕ್ಷೇತ್ರದಲ್ಲಿ ಅಭಿಮಾನಿಗಳು ಸಿಹಿ ಹಂಚಿದರು. ಆದರೆ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಮಹತ್ವದ ಹೇಳಿಕೆ ನೀಡಿದ್ದು, ಮುಂದಿನ 48 ಗಂಟೆಗಳ ಕಾಲ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ವಿಳಂಬವಾಗುವ ಸಾಧ್ಯತೆ ಇದೆ ಎಂದಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾತ್ರ ಪೂರ್ಣಾವಧಿಯ ಅಧಿಕಾರಕ್ಕಾಗಿ ಬಿಗೆ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಹೈಕಮಾಂಡ್ ನಾಯಕರಿಗೆ ತಮ್ಮ ನಿಲುವನ್ನು ಡಿಕೆಶಿ ತಿಳಿಸಿದ್ದು, ಸಿಎಲ್ ಪಿ ನಾಯಕನ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿರ್ಧಾರವನ್ನು ಪ್ರಕಟಿಸಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.