ಉಡುಪಿ, ಜೂನ್ 23: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್‌ನ್ನು ಅಭಿವೃದ್ಧಿಪಡಿಸಲಾಗಿರುತ್ತದೆ. ಇಲಾಖೆಯ ಫ್ರೂಟ್ಸ್ ತಂತ್ರಾಂಶದ ಎಫ್.ಐ.ಡಿ ಸಂಖ್ಯೆಯನ್ನು ಹೊಂದಿರುವ ರೈತರು ಗೂಗಲ್ ಪ್ಲೇ ಸ್ಟೋರ್‌ನಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ 2023” ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಂಡು, “ಇ-ಕೆವೈಸಿ ಮೂಲಕ ಆಧಾರ್ ದೃಢೀಕರಿಸಿ” ಆಯ್ಕೆ ಮಾಡಿ ಆಧಾರ್ ಸಂಖ್ಯೆಯನ್ನು ದಾಖಲಿಸಿ Generate OTP ಯನ್ನು ಆಯ್ಕೆ ಮಾಡಬೇಕು. ನಂತರದಲ್ಲಿ ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆಗೆ ಸ್ವೀಕೃತವಾಗುವ ಓ.ಟಿ.ಪಿ ಯನ್ನು ದಾಖಲಿಸಿದಾಗ, ರೈತರ ಎಫ್.ಐ.ಡಿ ಸಂಖ್ಯೆಗೆ ಜೋಡಣೆಯಾಗಿರುವ ಎಲ್ಲಾ ಜಮೀನುಗಳ ಮಾಹಿತಿಯು ಡೌನ್‌ಲೋಡ್ ಆಗುತ್ತದೆ. ಎಫ್.ಐ.ಡಿ ಸಂಖ್ಯೆಗೆ ಯಾವುದಾದರೂ ಸರ್ವೆ ನಂಬರ್‌ಗಳು ಜೋಡಣೆಯಾಗದಿದ್ದಲ್ಲಿ ಸೇರಿಸಿಕೊಳ್ಳಲು ಸಹ ಮೊಬೈಲ್ ಆಪ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ.
ನಂತರ ಸರ್ವೆ ನಂಬರ್, ಹಿಸ್ಸಾ, ಮಾಲೀಕನ ಹೆಸರು, ಆಯ್ಕೆ ಮಾಡಿ ಕ್ಷೇತ್ರವನ್ನು ನಮೂದಿಸಿ, ಸರ್ವೆ ನಂಬರ್‌ಗಳ ಗಡಿ ರೇಖೆಯೊಳಗೆ ನಿಂತು ಬೆಳೆ ವಿವರವನ್ನು ದಾಖಲಿಸಿ ಫೋಟೋ ತೆಗೆದು ಮಾಹಿತಿಯನ್ನು ಅಪ್‌ಲೋಡ್ ಮಾಡಬೇಕು. ರೈತರು ಎಫ್.ಐ.ಡಿ ಸಂಖ್ಯೆಯನ್ನು ಹೊಂದಿಲ್ಲದಿದ್ದಲ್ಲಿ ಹತ್ತಿರದ ಕೃಷಿ ಅಥವಾ ತೋಟಗಾರಿಕ ಇಲಾಖೆಗಳ ಕಛೇರಿಗಳನ್ನು ಸಂಪರ್ಕಿಸಿ ಎಫ್.ಐ.ಡಿ ಸಂಖ್ಯೆಯನ್ನು ಮಾಡಿಸಿಕೊಳ್ಳಬಹುದು. ಬೆಳೆ ಸಮೀಕ್ಷೆ ಮಾಹಿತಿಯನ್ನು ಪೃಕೃತಿ ವಿಕೋಪಗಳ ಪರಿಹಾರ ವಿತರಣೆ, ಬೆಂಬಲ ಬೆಲೆ ಯೋಜನೆಯ ಅರ್ಹ ಫಲಾನುಭವಿಗಳ ಗುರುತಿಸುವಿಕೆ, ಬೆಳೆ ವಿಮೆ ಯೋಜನೆ ಅನುಷ್ಠಾನ, ಋತುಮಾನವಾರು ವಿವಿಧ ಬೆಳೆಗಳ ವಿಸ್ತೀರ್ಣ ವರದಿ ಕಾರ್ಯ, ಬೆಳೆ ಕಟಾವು ಪ್ರಯೋಗ ಅನುಷ್ಠಾನ, ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನ ಹಾಗೂ ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಬಳಸಲಾಗುವುದು.
ರೈತರು ತಮ್ಮ ಜಮೀನಿನ ಬೆಳೆ ವಿವರವನ್ನು ಯಾವುದೇ ಲೋಪದೋಷಗಳಿಗೆ ಆಸ್ಪದವಿಲ್ಲದಂತೆ ತಾವೇ ದಾಖಲಿಸಲು ಸುವರ್ಣಾವಕಾಶ ಕಲ್ಪಿಸಿದ್ದು, ಇದರ ಸಂಪೂರ್ಣ ಪ್ರಯೋಜನವನ್ನು ಪಡೆಯುವಂತೆ ಹಾಗೂ ಜಿಲ್ಲೆಯ ರೈತರು ನಿಗದಿತ ಅವಧಿಯೊಳಗೆ ಮೊಬೈಲ್ ಆ್ಯಪ್‌ನಲ್ಲಿ ತಮ್ಮ ಜಮೀನಿನ ಸರ್ವೆ ನಂಬರ್‌ವಾರು ಬೆಳೆ ವಿವರವನ್ನು ನಿಖರವಾಗಿ ದಾಖಲಿಸಿ ಮುಂಗಾರು -2023ರ ಬೆಳೆ ಸಮೀಕ್ಷೆ ಕಾರ್ಯವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸುವಂತೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.