ಜಮಖಂಡಿ, ಜು. 22: ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶೂರ್ಪಾಲಿ ಗ್ರಾಮದಲ್ಲಿ ಗ್ರಾಮ ಒನ್ ಸಿಬ್ಬಂದಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಹಣ ಪಡೆದಿದ್ದಾರೆ ಎಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಗ್ರಾಮ ಒನ್ ಸಿಬ್ಬಂದಿಯ ಲಾಗಿನ್ ಐಡಿ ರದ್ದುಗೊಳಿಸಿ ಕ್ರಮ ಕೈಗೊಳ್ಳಲಾಗಿದೆ.
ಘಟನೆಯ ಕುರಿತು ಪ್ರತಿಕ್ರಿಯೆ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್, ಗೃಹಲಕ್ಷ್ಮೀ ಯೋಜನೆಯಲ್ಲಿ ಯಾವುದೇ ರೀತಿಯ ಅವ್ಯವಹಾರ, ಅಕ್ರಮವನ್ನು ಸರಕಾರ ಸಹಿಸುವುದಿಲ್ಲ. ಅಂತಹ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಕ್ಕೂ ಹಿಂಜರಿಯುವುದಿಲ್ಲ ಎಂದಿದ್ದಾರೆ.