ನವದೆಹಲಿ, ಆ.3: ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು. ಮೇ ತಿಂಗಳಲ್ಲಿ ನೂತನ ಮುಖ್ಯಮಂತ್ರಿಯಾದ ನಂತರ ಸಿದ್ಧರಾಮಯ್ಯ ಅವರು ಮೊದಲ ಬಾರಿಗೆ ಪ್ರಧಾನಿಯನ್ನು ಭೇಟಿಯಾದರು. ತಮ್ಮ ಹುಟ್ಟು ಹಬ್ಬದ ದಿನದಂದೇ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ್ದು ವಿಶೇಷವಾಗಿತ್ತು. ಬಳಿಕ ಮುಖ್ಯಮಂತ್ರಿ ಸಿದ್ಧರಾಮಯ್ಯ, ರಕ್ಷಣಾ ಸಚಿವ ರಾಜನಾಥ ಸಿಂಗ್ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, ಹಾಗೂ ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದರು.
ದಸರಾ ಹಬ್ಬದ ಸಂದರ್ಭದಲ್ಲಿ ಏರ್ ಶೋ ಆಯೋಜಿಸುವಂತೆ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮನವಿ ಸಲ್ಲಿಸಿದರು.
ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ, ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದಂತೆ ಚರ್ಚಿಸಿದರು.
ಶಿರಾಡಿ ಘಾಟ್ ನಲ್ಲಿ ಸುರಂಗ ನಿರ್ಮಿಸುವಂತೆ ಕೂಡ ಸಿಎಂ ಸಭೆಯಲ್ಲಿ ಒತ್ತಿ ಹೇಳಿದರು.