ಉಡುಪಿ, ಆ.31: ಉಡುಪಿ ತಾಲೂಕು ಕಡೆಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನಾ ಕಾರ್ಯಕ್ರಮವು ಬುಧವಾರ ನಿಡಂಬೂರು ಯುವಕ ಮಂಡಲ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷ ಜಯಕರ ಸೇರಿಗಾರ್ ಮಾತನಾಡಿ, ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯ ಆರ್ಥಿಕ ಸಬಲೀಕರಣ ಸಾಧ್ಯ ಎಂದರು. ಪಂಚಾಯತ್‌ನ ಉಪಾಧ್ಯಕ್ಷ ನವೀನ್ ಶೆಟ್ಟಿ ಮಾತನಾಡಿ, ಕಡೆಕಾರು ಗ್ರಾಮ ಪಂಚಾಯತ್ ನಲ್ಲಿ ಪ್ರಸ್ತುತ 1200 ಕ್ಕಿಂತಲೂ ಹೆಚ್ಚಿನ ಫಲಾನುಭವಿಗಳು ನೋಂದಣಿಯಾಗಿದ್ದು, ಅರ್ಹ ಫಲಾನುಭವಿಗಳು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿಯಾಗಿ ಯೋಜನೆಯ ಪ್ರಯೋಜನ ಪಡೆಯುವಂತೆ ತಿಳಿಸಿದರು.
ಮೈಸೂರಿನಲ್ಲಿ ನಡೆದ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನೆಯ ನೇರಪ್ರಸಾರ ಕಾರ್ಯಕ್ರಮವನ್ನು ಬೃಹತ್ ಎಲ್.ಇ.ಡಿ ಮೂಲಕ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿತ್ತು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಗಣೇಶ್ ನಾಯ್ಕ್, ಕಡೆಕಾರು ಗ್ರಾಮ ಪಂಚಾಯತ್ ಸದಸ್ಯರು, ಪಿ.ಡಿ.ಓ, ಲೆಕ್ಕ ಸಹಾಯಕರು, ಸಿಬ್ಬಂದಿ ವರ್ಗ, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.