ಉಡುಪಿ, ಸೆ.6: ಜಿಲ್ಲೆಯಲ್ಲಿ ಎರಡನೇ ಸುತ್ತಿನ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಲಸಿಕಾ ಕಾರ್ಯಕ್ರಮವನ್ನು ಸೆಪ್ಟಂಬರ್ 11 ರಿಂದ 16 ರವರೆಗೆ ಆಯೋಜಿಸಲಾಗುತ್ತಿದ್ದು, ಲಸಿಕಾಕರಣದಲ್ಲಿ ಪ್ರತಿಶತ ನೂರರಷ್ಟು ಪ್ರಗತಿ ಸಾಧಿಸಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎರಡನೇ ಸುತ್ತಿನ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಲಸಿಕಾ ಕಾರ್ಯಕ್ರಮದ ಕುರಿತ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಲಸಿಕೆ ವಂಚಿತ ಗರ್ಣಿಣಿಯರು ಹಾಗೂ 0-5 ವರ್ಷದ ಮಕ್ಕಳಿಗೆ ಆರೋಗ್ಯ ಇಲಾಖೆಯ ಮಾರ್ಗಸೂಚಿಯಂತೆ ಅಗತ್ಯ ಲಸಿಕೆಗಳನ್ನು ನೀಡುವುದರಿಂದ ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಸಾಧ್ಯ ಎಂದರು.
ಲಸಿಕಾ ಅಭಿಯಾನಕ್ಕೆ ಸಂಬಂಧಿಸಿದಂತೆ, ಶಾಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇತರೆ ಇಲಾಖೆಗಳು ಹಾಗೂ ಸ್ಥಳೀಯ ಸಂಸ್ಥೆಗಳು ಲಸಿಕಾ ಅಭಿಯಾನದ ಕುರಿತು ವ್ಯಾಪಕ ಪ್ರಚಾರ ಕೈಗೊಂಡು, ಸಾರ್ವಜನಿಕರಿಗೆ ಇಂದ್ರಧನುಷ್ ಕಾರ್ಯಕ್ರಮದ ಕುರಿತು ಅರಿವು ಮೂಡಿಸಲು ಶಾಲೆಗಳಲ್ಲಿ ಜಾಥಾವನ್ನು ಏರ್ಪಡಿಸಿ, 0.5 ವರ್ಷದೊಳಗಿನ ಲಸಿಕೆ ವಂಚಿತ ಮಕ್ಕಳು ಹಾಗೂ ಗರ್ಭಿಣಿಯರು ಲಸಿಕೆ ಪಡೆಯುವಂತೆ ಜಾಗೃತಿ ಮೂಡಿಸಬೇಕು ಎಂದರು. ಲಸಿಕೆಗೆ ಬಾಕಿ ಇರುವ, ಲಸಿಕೆ ಬಿಟ್ಟು ಹೋಗಿರುವ, ಲಸಿಕೆ ವಂಚಿತ 0-5 ವರ್ಷದೊಳಗಿನ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ಲಸಿಕೆಯನ್ನು ನೀಡಿ, ಅವರಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಹಾಗೂ ವಿಶೇಷವಾಗಿ ದಡಾರ-ರೂಬೆಲ್ಲಾ ರೋಗ ನಿರೋಧಕತೆಯ ಅಂತರವನ್ನು ಕಡಿಮೆ ಮಾಡುವ ಉದ್ದೇಶ ಹೊಂದಿದ್ದು, ಲಸಿಕಾ ಶಿಬಿರ ನಡೆಯುವ ದಿನಾಂಕ ಹಾಗೂ ಸ್ಥಳಗಳ ಕುರಿತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಪೋಷಕರಿಗೆ ಸೂಕ್ತ ಮಾಹಿತಿ ನೀಡುವಂತೆ ಕ್ರಮವಹಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಕಟ್ಟಡ ಕಾರ್ಮಿಕರುಗಳು ವಾಸಿಸುವ ಪ್ರದೇಶಗಳಿಗೆ ಭೇಟಿ ನೀಡಿ, ಲಸಿಕೆ ವಂಚಿತ ಕಾರ್ಮಿಕರ ಮಕ್ಕಳು ಲಸಿಕೆ ಪಡೆಯುವಂತೆ ಸಮುದಾಯಕ್ಕೆ ಮಿಷನ್ ಇಂದ್ರಧನುಷ್ 5.0 ಕಾರ್ಯಕ್ರಮದ ಕುರಿತು ಅರಿವು ಮೂಡಿಸಿ, ಲಸಿಕೆ ಪಡೆಯಲು ಪ್ರೇರಿಪಿಸಬೇಕು ಎಂದರು.
ಎರಡನೇ ಸುತ್ತಿನ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಲಸಿಕಾ ಕಾರ್ಯಕ್ರಮದ ಉದ್ಘಾಟನೆಯು ಸೆಪ್ಟಂಬರ್ 11 ರಂದು ನಗರದ ಅಲಂಕಾರ್ ಟಾಕೀಸ್ ಬಳಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ ಎಂದರು. ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ.ಎಂ.ಜಿ.ರಾಮ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಚಿದಾನಂದ ಸಂಜು, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ರಾಮ್ರಾವ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಣಪತಿ ಕೆ., ಜಿಲ್ಲಾಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.