ಬೆಂಗಳೂರು, ಸೆ. 15: ಬಹುತ್ವವು ಭಾರತೀಯ ಸಂಸ್ಕೃತಿಯ ಜೀವಾಳ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯಸಭಾ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕಾರಣಿ ಸದಸ್ಯರಾದ ಡಾ.ಸೈಯದ್ ನಾಸಿರ್ ಹುಸೇನ್ ಅವರ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇದೇ ಭಾರತದ ಮಣ್ಣಿನ ಸತ್ವ. ಭಾರತದ ಬಹುತ್ವದ ನಾಶ ಎಂದರೆ ಅದು ನಮ್ಮ ಸಂವಿಧಾನದ ನಾಶ. ಸಾವಿರಾರು ವರ್ಷಗಳ ಭಾರತದ ಬಹುತ್ವ ಸಂಸ್ಕೃತಿಯನ್ನು ನಾಶಪಡಿಸುವ ಹುನ್ನಾರ ನಡೆಯುತ್ತಿದೆ. ಇದಕ್ಕಾಗಿ ಆಕರ್ಷಕ ಪದಗಳನ್ನು, ಘೋಷಣೆಗಳನ್ನು ಕೊಡುತ್ತಿದ್ದಾರೆ. ಇದಕ್ಕೆ ಮರುಳಾದರೆ ಭಾರತದ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಬೆಸುಗೆ ನಾಶವಾಗುತ್ತದೆ.
ದೇಶದ ಹೆಸರನ್ನೇ ಈಗ ಬದಲಾಯಿಸುವ ಹುನ್ನಾರ ಮಾಡುತ್ತಾ ಡ್ರಾಮಾ ಮಾಡುತ್ತಿದ್ದಾರೆ. ತನ್ನ ಕಾರ್ಯಕ್ರಮಗಳಿಗೆ ಮೇಕ್ ಇನ್ ಇಂಡಿಯಾ , ಸ್ಕಿಲ್ ಇಂಡಿಯಾ, ಸ್ಟಾಂಡ್ ಅಪ್ ಇಂಡಿಯಾ ಅಂತೆಲ್ಲಾ ಹೆಸರಿಟ್ಟಿದ್ದ ಬಿಜೆಪಿ, ಕೇಂದ್ರ ಸರ್ಕಾರವೇ ಈಗ ಇಂಡಿಯಾ ಹೆಸರಿಗೆ ಬೆಚ್ಚಿ ಬಿದ್ದು ದೇಶದ ಹೆಸರು ‘ಭಾರತ’ ಎಂದು ಹೊಸದಾಗಿ ಹೇಳಲು ಹೊರಟಿದೆ. ನಾವು ಭಾರತ್ ಜೋಡೋ ನಡೆಸಿದವರು, ನಮಗೆ ಭಾರತ-ಇಂಡಿಯಾ ಬಗ್ಗೆ ಪಾಠ ಹೇಳುವ ಮೂರ್ಖತನಕ್ಕೆ ಬಿಜೆಪಿ ಪರಿವಾರ ಮುಂದಾಗಿದೆ. ಇವರಿಗೆ ಭಾರತದ ಬಗ್ಗೆಯೂ ಗೌರವ ಇಲ್ಲ, ಇಂಡಿಯಾದ ಘನತೆಯೂ ಗೊತ್ತಿಲ್ಲ.
ಭಾರತದ ಬಹುತ್ವ ಸಂಸ್ಕೃತಿ, ಸಂವಿಧಾನ ಕಾಂಗ್ರೆಸ್ ಕೈಗಳಲ್ಲಿ ಸುರಕ್ಷಿತವಾಗಿದೆ. ಯಾರು ಎಷ್ಟೆ ಹುನ್ನಾರ, ಪಿತೂರಿ ರಾಜಕಾರಣ ನಡೆಸಿದರೂ ನಾವು ಬಹುತ್ವದ ಭಾರತವನ್ನು, ಈ ಮಣ್ಣಿನ ಸೌಹಾರ್ದ ಪರಂಪರೆಯನ್ನು, ಜಾತ್ಯತೀತ ಸಂಸ್ಕೃತಿಯನ್ನು, ಭಾರತೀಯ ಸಂವಿಧಾನವನ್ನು ಕಾಪಾಡಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.