ಉಡುಪಿ, ಸೆ.16: ಮಹಾತ್ಮ ಗಾಂಧೀಜಿಯವರ ಜನ್ಮದಿನದ ಸ್ಮರಣಾರ್ಥವಾಗಿ ಸ್ವಚ್ಛ ಭಾರತ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಸ್ವಚ್ಛತೆಯೇ ದೈವತ್ವ ಎಂಬ ಕನಸನ್ನು ನನಸಾಗಿಸಲು ಸಪ್ಟೆಂಬರ್ 15 ರಿಂದ ಅಕ್ಟೋಬರ್ 2 ರವರೆಗೆ ಒಟ್ಟು 15 ದಿನಗಳ ಕಾಲ ಜಿಲ್ಲೆಯ ಎಲ್ಲಾ ಗ್ರಾಮೀಣ ಭಾಗದಲ್ಲಿ ಸ್ವಚ್ಛತಾ ಹೀ ಸೇವಾ/ ಸ್ವಚ್ಛತೆಯೇ ಸೇವೆ ಎಂಬ ವಿಶೇಷ ಆಂದೋಲನವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಹೇಳಿದರು. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸ್ವಚ್ಛತಾ ಹೀ ಸೇವಾ/ ಸ್ವಚ್ಛತೆಯೇ ಸೇವೆ ಆಂದೋಲನಕ್ಕೆ ಜಿಲ್ಲಾ ಹಂತದಲ್ಲಿ ಚಾಲನೆ ನೀಡಿ ಮಾತನಾಡಿದರು. ಜಿಲ್ಲೆಯ ಗ್ರಾಮೀಣ ಭಾಗದ ಹೆಚ್ಚು ಜನಜಂಗುಳಿಯಿರುವ ಬಸ್ ನಿಲ್ದಾಣ, ಬೀಚ್, ಸಾಂಸ್ಥಿಕ/ಸಮುದಾಯ ಭವನ, ಪ್ರವಾಸಿ ತಾಣಗಳು, ಐತಿಹಾಸಿಕ ಸ್ಮಾರಕಗಳು, ಶಾಲೆ, ಕಾಲೇಜು, ಅಂಗನವಾಡಿ, ಆಸ್ಪತ್ರೆ, ಆರೋಗ್ಯ ಕೇಂದ್ರಗಳು, ಸಾರ್ವಜನಿಕ ಸ್ಥಳಗಳು, ದೇವಸ್ಥಾನಗಳು ಮುಂತಾದ ಸ್ಥಳಗಳಲ್ಲಿ ಸ್ವಚ್ಚತೆಯ ಕುರಿತು ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗುವುದು ಎಂದರು. ಈ ಅವಧಿಯಲ್ಲಿ ಪಂಚಾಯತ್ ರಾಜ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆ, ಪ್ರವಾಸೋದ್ಯಮ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಆಂದೋಲನ ಮಾದರಿಯಲ್ಲಿ ಸ್ವಚ್ಛತಾ ಚಟುವಟಿಕೆಗಳನ್ನು ಆಯೋಜಿಸುವಂತೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸ್ವಚ್ಛತಾ ಹೀ ಸೇವಾ ಆಂದೋಲನದ ಕುರಿತ ಪೋಸ್ಟರ್‌ನ್ನು ಬಿಡುಗಡೆಗೊಳಿಸಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್ ರಾವ್, ಆರ್.ಡಬ್ಲ್ಯೂ ವಿಭಾಗದ ಕಾರ್ಯಪಾಲಕ ಅಭಿಯಂತರ, ಪಿ.ಅರ್.ಇ.ಡಿ ಕಾರ್ಯಪಾಲಕ ಅಭಿಯಂತರ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಉಡುಪಿ: ಸ್ವಚ್ಛತಾ ಹೀ ಸೇವಾ
ಉಡುಪಿ: ಸ್ವಚ್ಛತಾ ಹೀ ಸೇವಾ
Date: