ಬೆಳಗಾವಿ, ಅ.24: ಚೆನ್ನಮ್ಮನ ಕಿತ್ತೂರಿನಲ್ಲಿ ವಿಜಯಜ್ಯೋತಿಯನ್ನು ಸಡಗರ-ಸಂಭ್ರಮದಿಂದ ಬರಮಾಡಿಕೊಳ್ಳಲಾಯಿತು. ನಂತರ ಧ್ವಜಾರೋಹಣ ನೆರವೇರಿಸುವ ಮೂಲಕ ನಾಡಿನ ಹಬ್ಬ ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಲಾಯಿತು. ಇದಕ್ಕೂ ಮೊದಲು ಕಿತ್ತೂರಿನ ಚನ್ಮಮ್ಮ ವೃತ್ತದಲ್ಲಿರುವ ಚನ್ಮಮ್ಮಳ ಪುತ್ಥಳಿಗೆ ಹಾಗೂ ಮಹಾದ್ವಾರದ ಅಕ್ಕಪಕ್ಕದಲ್ಲಿರುವ ಅಮಟೂರು ಬಾಳಪ್ಪ ಹಾಗೂ ಸಂಗೊಳ್ಳಿ ರಾಯಣ್ಣನ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನಗಳನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಸಂಸದರಾದ ಮಂಗಲ ಅಂಗಡಿ, ಚನ್ನಮ್ಮನ ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ, ಬೆಳಗಾವಿ ಉತ್ತರ ಶಾಸಕ ಆಸೀಫ್ ರಾಜು ಸೇಠ್, ವಿ.ಪ. ಸದಸ್ಯ ಚನ್ನರಾಜ ಹಟ್ಟಿಹೊಳಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿ. ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ, ಬೈಲಹೊಂಗಲ ಉಪ ವಿಭಾಗಾಧಿಕಾರಿ ಪ್ರಭಾವತಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸತ್ಯನಾರಾಯಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್ ಕೋಣಿ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಮಹಾಂತೇಶ ಮುರಗೋಡ ಮತ್ತಿತರರು ಉಪಸ್ಥಿತರಿದ್ದರು.