ಉಡುಪಿ, ನ.9: ಪ್ರತಿಯೊಬ್ಬರು ಈ ದೇಶದ ಕಾನೂನುಗಳನ್ನು ಅರಿತು ಪರಿಪಾಲನೆ ಮಾಡಬೇಕು. ತಪ್ಪು ಮಾಡಿದಾಗ ಕಾನೂನಿನ ಜ್ಞಾನವಿಲ್ಲವೆಂದು ಹೇಳಿ ಯಾವುದೇ ಪ್ರಕರಣಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಹೇಳಿದರು. ಅವರು ನಗರದ ಎಂ.ಜಿ.ಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ (ರಿ), ಪೊಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ವೈಕುಂಠ ಬಾಳಿಗಾ ಕಾನೂನು ಕಾಲೇಜು ಹಾಗೂ ಎಂ.ಜಿ.ಎಂ ಪಿಯು ಕಾಲೇಜು ಉಡುಪಿ ಇವರ ಸಹಯೋಗದೊಂದಿಗೆ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ನಡೆದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬ ಮನುಷ್ಯನ ಹುಟ್ಟಿನಿಂದ ಕೊನೆಯವರೆಗಿನ ಜೀವನದ ಹಂತಗಳಲ್ಲಿ ಅನೇಕ ಕಾನೂನುಗಳು ರಕ್ಷಣೆಗೆ ಇರುತ್ತವೆ. ಇವುಗಳನ್ನು ಪ್ರತಿಯೊಬ್ಬರೂ ಅರಿತು ಪಾಲಿಸಬೇಕು. ಕಾನೂನುಗಳನ್ನು ಉಲ್ಲಂಘಿಸಿ, ಇವುಗಳ ಜ್ಞಾನ ಇಲ್ಲವೆಂದು ಹೇಳಿ, ಕಾನೂನಿನ ಚೌಕಟ್ಟಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದರು. ಶಿಕ್ಷಣ ಕಾಯಿದೆಯ ಪ್ರಕಾರ 6-14 ವರ್ಷದ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದು ಕಡ್ಡಾಯವಾಗಿದ್ದು, ಮಕ್ಕಳಿಂದ ದುಡಿಮೆ ಮಾಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ರಸ್ತೆ ಸಂಚಾರ ನಿಯಮಗಳನ್ನು ತಪ್ಪದೇ ಪಾಲಿಸಬೇಕು. 12 ನೇ ಶತಮಾನದಲ್ಲಿಯೇ ಬಸವಣ್ಣನವರು ಜಾತಿ ನಿರ್ಮೂಲನೆಯ ಕುರಿತು ತಮ್ಮ ವಚನಗಳಲ್ಲಿ ತಿಳಿಸಿದ್ದು, ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಕಾನೂನು ಪಾಲನೆ ಸಾಧ್ಯ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್ ಮಾತನಾಡಿ, ಕಾನೂನು ಪ್ರತಿಯೊಬ್ಬ ಮನುಷ್ಯನ ಜೀವನದ ಅವಿಭಾಜ್ಯ ಅಂಗ. ಪ್ರತೀ ವ್ಯಕ್ತಿಯೂ ಹುಟ್ಟಿನಿಂದ ಸಾಯುವವರೆಗೂ ತನಗೆ ಅರಿವಿಲ್ಲದಂತೆಯೇ ಪ್ರತಿದಿನ ಕಾನೂನಿನ ಚೌಕಟ್ಟಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುತ್ತಾನೆ. ಯುವಜನತೆ ವಿದ್ಯಾರ್ಥಿ ಜೀವನದಿಂದಲೇ ಕಾನೂನು ಕುರಿತು ಅರಿವು ಹೊಂದಿದಾಗ ಇನ್ನಷ್ಟು ಜನರಿಗೆ ತಲುಪಲು ಸಾಧ್ಯ ಎಂದರು. ಜನಸಾಮಾನ್ಯರಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಶಾಲಾ-ಕಾಲೇಜುಗಳಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯತ್ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ. ಕಾನೂನು ಸೌಲಭ್ಯದಿಂದ ವಂಚಿತರಾದವರಿಗೆ ಹಾಗೂ ಬಡವರ್ಗದವರಿಗೆ ಉಚಿತ ಕಾನೂನು ಸೇವಾ ಪ್ರಾಧಿಕಾರಗಳ ಕಾಯಿದೆ ಜಾರಿಗೆ ತರಲಾಗಿದ್ದು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನಿನ ಬಗ್ಗೆ ಅರಿವು ಮೂಡಿಸಿ, ಅವರಿಗೆ ನೆರವು ನೀಡುವುದು ಕಾನೂನು ಸೇವಾ ಪ್ರಾಧಿಕಾರದ ಕರ್ತವ್ಯವಾಗಿದೆ ಎಂದರು. ಕಾನೂನಿನ ಅಡಿಯಲ್ಲಿ ಮಹಿಳೆಯರು, ಮಕ್ಕಳು, ಪ್ರಾಕೃತಿಕ ವಿಕೋಪಕ್ಕೆ ಒಳಗಾದವರು, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ, ವಾರ್ಷಿಕ ಆದಾಯ ಮೂರು ಲಕ್ಷಕ್ಕಿಂತ ಕಡಿಮೆ ಇರುವ ಎಲ್ಲಾ ಜಾತಿ ಮತ್ತು ವರ್ಗದವರಿಗೆ ಹಾಗೂ ಮಾನಸಿಕ ಅಸ್ವಸ್ಥರಿಗೆ ಉಚಿತ ಕಾನೂನು ನೆರವನ್ನು ನೀಡಲಾಗುತ್ತಿದ್ದು, ಸಾರ್ವಜನಿಕರು ಹಾಗೂ ಮಕ್ಕಳಿಗಿರುವ ಹಕ್ಕುಗಳು ಸರಿಯಾಗಿ ಅನುಷ್ಠಾನವಾಗಬೇಕು ಎಂದರು.
ವ್ಯಾಜ್ಯಪೂರ್ವ ಹಾಗೂ ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಕಾನೂನಿನ ಅಡಿಯಲ್ಲಿ ರಾಜೀ ಸಂದಾನದ ಮೂಲಕ ಇತ್ಯರ್ಥಪಡಿಸಲು ಲೋಕ ಅದಾಲತ್ನಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದರು. ಎಂ.ಜಿ.ಎಂ, ಪಿಯು ಕಾಲೇಜಿನ ಪ್ರಾಂಶುಪಾಲೆ ಮಾಲತಿದೇವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ರೋಹಿತ್ ಎಸ್ ಆಮೀನ್ ಹಾಗೂ ಡಾ. ನವೀನ್ ಚಂದ್ರ ಸಿ.ಬಿ ಕಾನೂನುಗಳ ಕಾಯ್ದೆಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಜಿಲ್ಲಾ ಅಧ್ಯಕ್ಷ ರೆನಾಲ್ಡ್ ಪ್ರವೀಣ್ ಕುಮಾರ್, ಎಂ.ಜಿ.ಎಂ ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷ್ಮೀ ನಾರಾಯಣ ಕಾರಂತ, ಕಾಲೇಜಿನ ಅಧ್ಯಾಪಕರುಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.