ಕೊಪ್ಪಳ, ಡಿ.20: ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಸ್ಥಾನ ಹಾಗೂ ಅಂಜನಾದ್ರಿ ಬೆಟ್ಟಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳ ಸಭೆ ನಡೆಸಿದರು. ಅಂಜನಾದ್ರಿ ಬೆಟ್ಟದಲ್ಲಿ ಗುರುವಾರ ಮತ್ತು ಶುಕ್ರವಾರ ನಡೆಯುವ ಹನುಮ ಮಾಲಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಭಕ್ತಾದಿಗಳಿಗೆ ಅಗತ್ಯ ಸೌಕರ್ಯ ಒದಗಿಸಲು ಮುಜರಾಯಿ ಇಲಾಖೆ ವತಿಯಿಂದ ₹40 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ ಸಚಿವರು, ಭಕ್ತಾದಿಗಳಿಗೆ ಊಟ, ವಸತಿ, ಕುಡಿಯುವ ನೀರು, ಶೌಚಾಲಯ ಮತ್ತಿತರ ಸೌಲಭ್ಯ ಕಲ್ಪಿಸಲು ಈ ಅನುದಾನ ಸಹಕಾರಿಯಾಗಲಿದೆ ಎಂದರು.
ಸಚಿವ ಶಿವರಾಜ್ ತಂಗಡಗಿ, ಗಂಗಾವತಿ ಶಾಸಕರಾದ ಜನಾರ್ಧನ ರೆಡ್ಡಿ, ಮಾಜಿ ಶಾಸಕ ಬಸವರಾಜ ಹಿಟ್ನಾಳ್, ಮುಜರಾಯಿ ಇಲಾಖೆಯ ಆಯುಕ್ತ ಬಸವರಾಜೇಂದ್ರ ಎಚ್., ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಕಡಿ, ಕೊಪ್ಪಳ ತಹಶೀಲ್ದಾರ್ ವಿಠಲ್ ಚೌಗಲಾ, ದೇವಾಲಯದ ಆಡಳಿತಾಧಿಕಾರಿ ಅರವಿಂದ ಸುತಗುಂಡಿ, ತಾಲ್ಲೂಕು ಪಂಚಾಯಿತಿ ಇಒ ದುಂಡಪ್ಪ ತುರಾದಿ ಇದ್ದರು.