ಉಡುಪಿ, ಜ.2: ಕಟಪಾಡಿಯ ತ್ರಿಶಾ ವಿದ್ಯಾ ಪಿಯು ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ತ್ರಿಶಾ ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ಡಾ. ನಾರಾಯಣ್ ಕಾಯಾರ್ಕಟ್ಟೆ ಮಾತನಾಡಿ, ಸಾಧ್ಯವಾದಷ್ಟು ಜ್ಞಾನವನ್ನು ಮೈಗೂಡಿಸಿಕೊಳ್ಳಿ ಹಾಗೂ ಅಧ್ಯಯನದ ಜೊತೆಗೆ ಮನೆಯಲ್ಲಿ ಕೆಲಸಗಳನ್ನು ಮಾಡಿ. ಮತ್ತು ಕನಿಷ್ಠ ನಿರೀಕ್ಷೆಗಳನ್ನು ಇಟ್ಟುಕೊಳ್ಳುವ ಮೂಲಕ ವಿಷಯಗಳನ್ನು ತೆಗೆದುಕೊಳ್ಳಿ. ನಿಮ್ಮ ವೈಫಲ್ಯಗಳನ್ನು ಸ್ವೀಕರಿಸಲು ಮತ್ತು ನಿರ್ವಹಿಸಲು ಕಲಿಯಿರಿ ಜೊತೆಗೆ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಗೌರವ ಅತಿಥಿಯಾಗಿ ಎಸ್.ವಿ.ಎಸ್. ಟ್ರಸ್ಟ್ ನ ಕಾರ್ಯದರ್ಶಿಗಳಾದ ಕೆ.ಸತ್ಯೇಂದ್ರ ಪೈ ಅವರು ತ್ರಿಶಾ ಸಂಸ್ಥೆ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ತ್ರಿಶಾ ಸಂಸ್ಥೆಗಳ ಅಧ್ಯಕ್ಷರಾದ ಸಿ.ಎ. ಗೋಪಾಲಕೃಷ್ಣ ಭಟ್ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟಿ ನಮಿತಾ ಜಿ ಭಟ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಅನಂತ್ ಪೈ ಕಾಲೇಜಿನ ವಾರ್ಷಿಕ ವರದಿ ಮಂಡಿಸಿದರು. ಪ್ರಾಧ್ಯಾಪಕರಾದ ವರ್ಷ ಬಹುಮಾನ ವಿತರಣೆಯ ಪಟ್ಟಿಯನ್ನು ವಾಚಿಸಿದರು. ಧನ್ಯ ಸ್ವಾಗತಿಸಿ, ಅಕ್ಷತಾ ವಂದಿಸಿದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.