ಕುಂದಾಪುರ, ಜ. 4: ಯಕ್ಷ ಶಿಕ್ಷಣ ಟ್ರಸ್ಟ್ (ರಿ) ಉಡುಪಿ, ಪ್ರದರ್ಶನ ಸಂಘಟನಾ ಸಮಿತಿ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಕಿಶೋರ ಯಕ್ಷಗಾನ ಸಂಭ್ರಮದ ಉದ್ಘಾಟನಾ ಕಾರ್ಯಕ್ರಮ ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ನಡೆಯಿತು. ಉದ್ಘಾಟನೆ ನೆರವೇರಿಸಿ ಮಾತನಾಡಿದ ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿಯವರು, ಮುಂದಿನ ದಿನದಲ್ಲಿ ಕ್ಷೇತ್ರದ ಎಲ್ಲಾ ಪ್ರೌಢಶಾಲೆಗಳಲ್ಲೂ ಯಕ್ಷಗಾನದ ತರಬೇತಿಯನ್ನು ಎಲ್ಲಾ ವಿದ್ಯಾರ್ಥಿಗಳಿಗೆ ಲಭ್ಯವಾಗಲಿ ಎಂದರು.
ಕುಂದಾಪುರ ತಹಶೀಲ್ದಾರರಾದ ಶೋಭಾಲಕ್ಷ್ಮಿ ಶುಭ ಹಾರೈಸಿದರು. ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಯಕ್ಷಗಾನ ಕಲಾರಂಗ ಅಧ್ಯಕ್ಷರಾದ ಎಂ ಗಂಗಾಧರ ರಾವ್, ಪ್ರತಿಷ್ಠಿತ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾದ ಗೌತಮ್ ಶೆಟ್ಟಿ, ಉದ್ಯಮಿ ಸೂರ್ಯಕಾಂತ ದಾಪೇಧರ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಬಿ.ಜಿ. ಉಪಸ್ಥಿತರಿದ್ದರು.
ಪ್ರದರ್ಶನ ಸಂಘಟನಾ ಸಮಿತಿ ಕುಂದಾಪುರ ಇದರ ಕಾರ್ಯದರ್ಶಿ ಶಂಕರ ಅಂಕದಕಟ್ಟೆ ಸ್ವಾಗತಿಸಿ, ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ ಕಾರ್ಯದರ್ಶಿ ಮುರಳಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು. ಯಕ್ಷ ಟ್ರಸ್ಟ್ ನ ನಾರಾಯಣ ಹೆಗಡೆ ವಂದಿಸಿದರು. ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ರಾಮಶ್ವಮೇಧ ಕಥಾನಕದ ಯಕ್ಷಗಾನ ಕಾರ್ಯಕ್ರಮ ನಡೆಯಿತು.