ಉಡುಪಿ, ಜ.22: ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಫೆಬ್ರವರಿ 3 ರಿಂದ 5 ರ ವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಫೆ.3 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ಮತ್ತು ಮ.2.30 ರಿಂದ 5 ಗಂಟೆಯ ವರೆಗೆ ಮಣಿಪಾಲ್‌ನ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ ನಡೆಸಲಿದ್ದಾರೆ. ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿ ಹಾಗೂ ನೌಕರರಿಂದ ಕಾನೂನು ರೀತ್ಯಾ ಆಗಬೇಕಾದ ಕೆಲಸದಲ್ಲಿ ವಿಳಂಬ ಆಗಿದ್ದಲ್ಲಿ ಅಥವಾ ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಅಥವಾ ಇನ್ಯಾವುದೇ ರೀತಿಯ ದುರಾಡಳಿತದಲ್ಲಿ ತೊಡಗಿದ್ದರೆ, ತೊಂದರೆಗೆ ಒಳಗಾದ ಸಾರ್ವಜನಿಕರು ಲಿಖಿತ ರೂಪದಲ್ಲಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ.
ಫೆ.5 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ಮತ್ತು 2.30 ರಿಂದ ಸಂಜೆ 5 ಗಂಟೆಯ ವರೆಗೆ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲೆಗೆ ಸಂಬಂಧಪಟ್ಟ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ವಿಚಾರಣೆ/ ತನಿಖೆ ಬಾಕಿಯಿರುವ ಪ್ರಕರಣಗಳಿಗೆ ಸಂಬಂಧಿಸಿದ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತಿಯ ವಿಚಾರಣೆಯನ್ನು ನಡೆಸಲಾಗುತ್ತದೆ. ದೂರುದಾರರು ನಿಗದಿತ ಸಮಯದಲ್ಲಿ ಸಭೆಯಲ್ಲಿ ಹಾಜರಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.