ನವದೆಹಲಿ, ಫೆ.9: ಮಾಜಿ ಪ್ರಧಾನಿಗಳಾದ ಪಿ.ವಿ.ನರಸಿಂಹರಾವ್, ಚೌಧರಿ ಚರಣ್ ಸಿಂಗ್ ಮತ್ತು ಹಸಿರು ಕ್ರಾಂತಿಯ ಪಿತಾಮಹ ಡಾ.ಎಂ.ಎಸ್.ಸ್ವಾಮಿನಾಥನ್ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನವನ್ನು ಭಾರತ ಸರ್ಕಾರ ಶುಕ್ರವಾರ ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಈ ಘೋಷಣೆ ಮಾಡಿದ್ದಾರೆ. ಭಾರತ ರತ್ನಕ್ಕೆ ಆಯ್ಕೆಯಾದ ಸಾಧಕರ ಬಗ್ಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ, ಪಿವಿ ನರಸಿಂಹ ರಾವ್ ಅವರು ಒಬ್ಬ ಖ್ಯಾತ ವಿದ್ವಾಂಸರು ಮತ್ತು ರಾಜಕಾರಣಿಯಾಗಿ ವಿವಿಧ ಹುದ್ದೆಗಳಲ್ಲಿ ದೇಶಕ್ಕಾಗಿ ಮಹತ್ವದ ಸೇವೆ ಸಲ್ಲಿಸಿದ್ದಾರೆ. ಅವರ ದೂರದೃಷ್ಟಿಯ ನಾಯಕತ್ವ ಭಾರತವನ್ನು ಆರ್ಥಿಕವಾಗಿ ಪ್ರಗತಿ ಸಾಧಿಸಲು ಮತ್ತು ದೇಶದ ಏಳಿಗೆ ಮತ್ತು ಬೆಳವಣಿಗೆಗೆ ಭದ್ರ ಬುನಾದಿ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಭಾರತದ ವಿದೇಶಾಂಗ ನೀತಿ, ಭಾಷೆ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಅವರು ನೀಡಿದ ಕೊಡುಗೆಗಳು ರಾಷ್ಟನಿರ್ಮಾಣಕ್ಕೆ ಸಹಕಾರಿಯಾಗಿದೆ.
ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರು ತಮ್ಮ ಇಡೀ ಜೀವನವನ್ನು ರೈತರ ಹಕ್ಕುಗಳು ಮತ್ತು ಕಲ್ಯಾಣಕ್ಕಾಗಿ ಮುಡಿಪಾಗಿಟ್ಟಿದ್ದರು. ತುರ್ತು ಪರಿಸ್ಥಿತಿಯ ವಿರುದ್ಧದ ಅವರ ನಿಲುವು ಶ್ಲಾಘನೀಯ. ರೈತರ ಕಲ್ಯಾಣ ಮತ್ತು ಪ್ರಜಾಪ್ರಭುತ್ವಕ್ಕೆ ಅವರ ಬದ್ಧತೆ ಇಡೀ ರಾಷ್ಟ್ರಕ್ಕೆ ಸ್ಪೂರ್ತಿದಾಯಕವಾಗಿದೆ. ಡಾ.ಎಂ.ಎಸ್.ಸ್ವಾಮಿನಾಥನ್ ಅವರು ಸವಾಲಿನ ಸಮಯದಲ್ಲಿ ಭಾರತವು ಕೃಷಿಯಲ್ಲಿ ಸ್ವಾವಲಂಬನೆ ಸಾಧಿಸಲು ಸಹಾಯ ಮಾಡುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಮತ್ತು ಭಾರತೀಯ ಕೃಷಿಯನ್ನು ಆಧುನೀಕರಿಸುವಲ್ಲಿ ಮಹೋನ್ನತ ಪ್ರಯತ್ನಗಳನ್ನು ಮಾಡಿದ್ದಾರೆ. ಡಾ. ಸ್ವಾಮಿನಾಥನ್ ಅವರ ದೂರದೃಷ್ಟಿಯ ನಾಯಕತ್ವವು ಭಾರತೀಯ ಕೃಷಿಯನ್ನು ಪರಿವರ್ತಿಸುವುದಲ್ಲದೆ ರಾಷ್ಟ್ರದ ಆಹಾರ ಭದ್ರತೆಗೆ ಅನನ್ಯ ಕೊಡುಗೆಗಳನ್ನು ನೀಡಿದೆ ಎಂದು ಪ್ರಧಾನಿ ಹೇಳಿದರು.