ಉಡುಪಿ, ಫೆ.18: 12 ನೇ ಶತಮಾನ ವಚನ ಕ್ರಾಂತಿ ನಡೆದ ಮಹತ್ವಪೂರ್ಣವಾದ ಕಾಲಘಟ್ಟ. ಈ ಕಾಲಘಟ್ಟದಲ್ಲಿ ಕ್ರಾಂತಿಯೋಗಿ ಶ್ರೀ ಜಗಜ್ಯೋತಿ ಬಸವಣ್ಣನವರು ಪ್ರತಿಪಾದಿಸಿದ ಸಾರ್ವತ್ರಿಕ ಮೌಲ್ಯಗಳಾದ ಜಾತಿ ರಹಿತ ಸಮಾಜ, ಕಾಯಕದ ಮಹತ್ವ ಮತ್ತು ವರ್ಗರಹಿತ ಸಮಾಜ ಹಾಗೂ ಜೀವನ ಮಾರ್ಗ ಸರ್ವಕಾಲಕ್ಕೂ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಹೇಳಿದರು. ಅವರು ಶನಿವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ವಿಶ್ವಗುರು ಬಸವಣ್ಣ ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂಬ ಭಾವಚಿತ್ರವನ್ನು ಅನಾವರಣಗೊಳಿಸಿ ಮಾತನಾಡುತ್ತಿದ್ದರು.
ಸಮಾಜದಲ್ಲಿ ಮಹಿಳಾ ಅಸಮಾನತೆ ಹಾಗೂ ಮೂಢನಂಬಿಕೆಗಳ ಬಗ್ಗೆ ವಿರೋಧ ವ್ಯಕ್ತಪಡಿಸಿದ ಇವರು, ಸಾರ್ವತ್ರಿಕ ಹಾಗೂ ಸಾರ್ವಕಾಲಿಕ ಸರ್ವಜನ ಸಮಭಾವದ ತಾತ್ವಿಕತೆಗಳ ಮೂಲಕ ಕಲ್ಯಾಣ ಸಮಾಜ ಕಟ್ಟಲು ಬೇಕಾದ ನೀತಿಯನ್ನು ಬೋಧಿಸಿರುವುದರಿಂದ ನಮ್ಮ ದೇಶದ ಸಂವಿಧಾನದ ಆಶಯಗಳಿಗೆ ಅವರ ಚಿಂತನೆಗಳು ಸಾಂಸ್ಕೃತಿಕ ರಾಯಭಾರಿತ್ವಕ್ಕೆ ಸಮರ್ಥನೀಯವಾದ ನೆಲೆ ಒದಗಿಸುವ ಮೇರೆಗೆ ಸರಕಾರದ ವತಿಯಿಂದ ಶ್ರೀ ಜಗಜ್ಯೋತಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲಾಗಿದೆ. ಈ ಪ್ರಯುಕ್ತ ಇಂದು ರಾಜ್ಯದಾದ್ಯಂತ ಪ್ರತಿ ಜಿಲ್ಲೆಯಲ್ಲಿಯೂ ಬಸವಣ್ಣವರ ಭಾವಚಿತ್ರವನ್ನು ಅನಾವರಣಗೊಳಿಸಲಾಗುತ್ತಿದೆ ಎಂದರು. ಸಾಮಾಜಿಕ, ಸಾಂಸ್ಕೃತಿಕ ಹಾಗೂ ವೈಚಾರಿಕವಾಗಿ ಕ್ರಾಂತಿ ಜರುಗಿದ 12 ನೇ ಶತಮಾನದ ಕಾಲಘಟ್ಟದ ಸಾಕಷ್ಟು ವಚನಕಾರರಲ್ಲಿ ಮುಖ್ಯವಾದವರು ಶ್ರೀ ಜಗಜ್ಯೋತಿ ಬಸವಣ್ಣನವರು. ಮೂಢನಂಬಿಕೆ, ಜಾತಿ ತಾರತಮ್ಯ ಹೋಗಲಾಡಿಸಲು ಕಲ್ಯಾಣದಲ್ಲಿ ಬಸವಣ್ಣನವರ ನೇತೃತ್ವದಲ್ಲಿ ಕ್ರಾಂತಿ ನಡೆಯಿತು. ಎಲ್ಲವನ್ನು ಮೆಟ್ಟಿನಿಂತು ಜಾತಿ ತಾರತಮ್ಯದ ಬೇಧಭಾವವಿಲ್ಲದೇ ಜಾತಿ ರಹಿತ ಸಮಾಜ ಕಟ್ಟಿದ್ದಾರೆ. ಇಂತಹ ವ್ಯಕ್ತಿಗೆ ನಾವೆಲ್ಲರೂ ಗೌರವಿಸುವುದರೊಂದಿಗೆ ಅವರ ಜೀವನ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಸಮಾಜದಲ್ಲಿ ಬದಲಾವಣೆ ಸಾಧ್ಯ ಎಂದರು.
ಇದೇ ಸಂದರ್ಭದಲ್ಲಿ ಕಚೇರಿಗಳಲ್ಲಿ ಅಳವಡಿಸಲು ಶ್ರೀ ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸಲಾಯಿತು. ಬನ್ನಂಜೆ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದ ವಿದ್ಯಾರ್ಥಿನಿಯರಿಂದ ಸಂವಿಧಾನ ಜಾಗೃತಿ ಜಾಥಾ ಕುರಿತು ನೃತ್ಯ ಪ್ರದರ್ಶಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ., ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ರಾಜು ಮೊಗವೀರ, ಬಸವ ಸಮಿತಿಯ ಜಿಲ್ಲಾ ಅಧ್ಯಕ್ಷ ಡಾ.ಚಂದ್ರಶೇಖರ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಬಸವ ವೇದಿಕೆಯ ಪದಾಧಿಕಾರಿಗಳು, ಸಂಘ-ಸಂಸ್ಥೆಗಳ ಮುಖ್ಯಸ್ಥರುಗಳು, ಸಾರ್ವಜನಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶಿಕ್ಷಕ ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ ನಿರೂಪಿಸಿ ವಂದಿಸಿದರು.