ಉಡುಪಿ, ಫೆ. 22: ದ್ವಿತೀಯ ಪಿ.ಯು.ಸಿ ಪರೀಕ್ಷೆಯು ಮಾರ್ಚ್ 1 ರಿಂದ 22 ರ ವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಬದ್ಧವಾಗಿ ಪರೀಕ್ಷೆಗಳನ್ನು ನಡೆಸಿ, ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪಿ.ಯು.ಸಿ ಪರೀಕ್ಷೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ದ್ವಿತೀಯ ಪಿಯು ಪರೀಕ್ಷೆಗಳು ಮಾರ್ಚ್ 1 ರಿಂದ 22 ರ ವರೆಗೆ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರ ವರೆಗೆ ಜಿಲ್ಲೆಯ 28 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಹೊಸದಾಗಿ 15,413, ಖಾಸಗಿ 433 ಹಾಗೂ 214 ಮರು ಪರೀಕ್ಷೆ ಬರೆಯುವವರು ಸೇರಿದಂತೆ ಒಟ್ಟು 16,060 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ವಿಜ್ಞಾನ ವಿಭಾಗದಲ್ಲಿ 7745 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 6564 ವಿದ್ಯಾರ್ಥಿಗಳು ಹಾಗೂ ಕಲಾ ವಿಭಾಗದಲ್ಲಿ 1054 ವಿದ್ಯಾರ್ಥಿಗಳು ಹೊಸದಾಗಿ ಪರೀಕ್ಷೆ ಬರೆಯಲಿದ್ದಾರೆ ಎಂದರು. ವಿದ್ಯಾರ್ಥಿಗಳು ಪರೀಕ್ಷಾ ತರಗತಿಗಳಲ್ಲಿ ಸುಲಲಿತವಾಗಿ ಪರೀಕ್ಷೆಯನ್ನು ಬರೆಯಲು ಪೂರಕ ವಾತಾವರಣ ಕಲ್ಪಿಸಲು ಅಗತ್ಯ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಪ್ರಶ್ನೆಪತ್ರಿಕೆ ವಿತರಿಸುವ ತಂಡ, ಪರೀಕ್ಷಾ ಕೇಂದ್ರದ ವೀಕ್ಷಕರ ನೇಮಕ, ಪ್ರಶ್ನೆ ಪತ್ರಿಕೆ ಪಾಲಕರ ತಂಡ, ಜಿಲ್ಲಾ ಮಾರ್ಗಾಧಿಕಾರಿಗಳ ತಂಡ, ಪರೀಕ್ಷಾ ಪರಿವೀಕ್ಷಕರ ಸಂಚಾರ ಜಾಗೃತ ದಳ ಮತ್ತಿತರ ತಂಡಗಳನ್ನು ಈಗಾಗಲೇ ನೇಮಿಸಲಾಗುವುದು ಎಂದರು.
ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ನಿಗಧಿತ ಕಾಲಾವಧಿಯೊಳಗೆ ಹಾಜರಾಗಲು ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆಯನ್ನು ಕೆ.ಎಸ್.ಆರ್.ಟಿ.ಸಿ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳು ಕೈಗೊಳ್ಳಬೇಕೆಂದು ಸೂಚನೆ ನೀಡಿದರು. ಪರೀಕ್ಷಾ ಕೇಂದ್ರಗಳಿಗೆ ಗೌಪ್ಯ ವಸ್ತುಗಳನ್ನು ಜಿಲ್ಲಾ ಖಜಾನೆಯಿಂದ ಪಡೆದು ಪರೀಕ್ಷಾ ಕೇಂದ್ರಗಳಿಗೆ ಸಕಾಲದಲ್ಲಿ ವಿತರಿಸಬೇಕು. ಪ್ರಶ್ನೆ ಪತ್ರಿಕೆಯ ಬಂಡಲ್‌ಗಳನ್ನು ಬಿಚ್ಚುವಾಗ ಹಾಗೂ ಉತ್ತರ ಪತ್ರಿಕೆಗಳನ್ನು ಸ್ವೀಕರಿಸಿ, ಬಂಡಲ್ ಮಾಡುವಾಗ ಸಿ.ಸಿ.ಟಿ.ವಿ ವೀಕ್ಷಣೆಯಲ್ಲಿಯೇ ನಿರ್ವಹಿಸಬೇಕೆಂದು ಸೂಚನೆ ನೀಡಿದರು. ಪರೀಕ್ಷೆ ಅಕ್ರಮಗಳಾದ ಪ್ರಶ್ನೆ ಪತ್ರಿಕೆ ಸೋರಿಕೆ, ಅವುಗಳ ಖರೀದಿ ಮತ್ತು ಮಾರಾಟ, ಮೊಬೈಲ್ ಫೋನ್ ಅಥವಾ ಎಲೆಕ್ಟ್ರಾನಿಕ್ ಉಪಕರಣಗಳ ಮುಖಾಂತರ ಪ್ರಶ್ನೆ ಪತ್ರಿಕೆ ಸೋರಿಕೆಗೆ ವಿದ್ಯಾರ್ಥಿ ಹಾಗೂ ವ್ಯಕ್ತಿಗಳೊಂದಿಗೆ ಸಹಕರಿಸುವುದು, ಪ್ರಶ್ನೆ ಪತ್ರಿಕೆ ಬಗ್ಗೆ ವದಂತಿ ಹರಡುವುದು, ಅಕ್ರಮಕ್ಕೆ ಪ್ರೇರೇಪಿಸುವುದು ಮತ್ತು ಪ್ರೋತ್ಸಾಹಿಸುವುದು ಕಂಡುಬಂದಲ್ಲಿ ಅವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಲಾಗುವುದು. ಯಾರೊಬ್ಬರೂ ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ ಎಂದರು. ಸಾಮಾಜಿಕ ಜಾಲತಾಣಗಳಲ್ಲಿ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಅಥವಾ ಕೈಬರಹ ಪ್ರಶ್ನೆಗಳನ್ನು ರವಾನಿಸಿ, ಒದಂತಿಗಳನ್ನು ಹಬ್ಬಿಸಿ, ವಿದ್ಯಾರ್ಥಿ, ಪೋಷಕರು ಹಾಗೂ ಜನಸಾಮಾನ್ಯರಲ್ಲಿ ಗೊಂದಲ ಸೃಷ್ಠಿಸಿದರೆ ಅಂತಹವರ ವಿರುದ್ಧ ಸೈಬರ್ ಕ್ರೈಂ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು. ಪರೀಕ್ಷಾ ಕೇಂದ್ರದ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಹಾಗೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು ಎಂದರು.
ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಎಎಸ್‌ಪಿ ಸಿದ್ದಲಿಂಗಪ್ಪ, ಸಹಾಯಕ ಕಮೀಷನರ್ ರಶ್ಮಿ ಎಸ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಡಿಡಿಪಿಐ ಗಣಪತಿ ಕೆ ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ತಹಶೀಲ್ದಾರರು, ವಿವಿಧ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.