ಬೆಂಗಳೂರು, ಮಾ.1: ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿರುವ ಜನಪ್ರಿಯ ತಾಣವಾಗಿರುವ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಮಧ್ಯಾಹ್ನ ಸ್ಪೋಟ ಸಂಭವಿಸಿದ್ದು, ಕನಿಷ್ಠ ಎಂಟು ಮಂದಿ ಗಾಯಗೊಂಡಿದ್ದಾರೆ. ಸ್ಪೋಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸರು ದೌಡಾಯಿಸಿ ತನಿಖೆ ನಡೆಸುತ್ತಿದ್ದಾರೆ. ಸ್ಪೋಟದ ಪರಿಣಾಮ ಗಾಜಿನ ಚೂರುಗಳು ಮತ್ತು ಪೀಠೋಪಕರಣಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಮೂಲಗಳ ಪ್ರಕಾರ ವ್ಯಕ್ತಿಯೋರ್ವ ಕೆಫೆಯಲ್ಲಿ ಬ್ಯಾಗ್ ಇಟ್ಟು ತೆರಳಿದ್ದ ಎಂದು ಹೇಳಲಾಗುತ್ತಿದೆ.
ತಪ್ಪಿತಸ್ಥರ ವಿರುದ್ಧ ಕ್ರಮ- ಸಿಎಂ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿರುವ ಸ್ಪೋಟದ ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಖಚಿತವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.