ಉಡುಪಿ, ಮಾ.28: ಶ್ರಮ ಜೀವನಕ್ಕೆ ಹೆಸರುವಾಸಿಯಾಗಿರುವ ತಿಗಳ ಸಮುದಾಯದ ಆರಾಧ್ಯ ಧೈವ್ಯ ಅಗ್ನಿಬನ್ನಿರಾಯರು. ಇಂತಹ ಮಹಾತ್ಮರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಜೀವನ ಅರ್ಥಪೂರ್ಣವಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಗುರುವಾರ ನಗರದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಅಗ್ನಿಬನ್ನಿರಾಯ ಜಯಂತಿ ಕಾರ್ಯಕ್ರಮದಲ್ಲಿ ಅಗ್ನಿಬನ್ನಿರಾಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು. ತೋಟಗಾರಿಕೆ ಕಸುಬನ್ನು ಮಾಡಿಕೊಂಡು ಬರುತ್ತಿರುವ ತಿಗಳ ಜನಾಂಗದವರಿಗೆ ಗೌರವ ಸೂಚಿಸುವ ಸಲುವಾಗಿ ಅಗ್ನಿಬನ್ನಿರಾಯರ ಜಯಂತಿಯನ್ನು ಆಚರಿಸಲಾಗುತ್ತಿದೆ. ತಿಗಳ ಸಮುದಾಯದರು ತಮ್ಮ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ, ಎಲ್ಲಾ ಕ್ಷೇತ್ರಗಳಲ್ಲಿಯೂ ತೊಡಗಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದರು.
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ಒಂಬತ್ತು ಕ್ಕೂ ಹೆಚ್ಚು ಪುರಾಣಗಳಲ್ಲಿ ಅಗ್ನಿ ಬನ್ನಿರಾಯರ ಬಗ್ಗೆ ಪ್ರಸ್ತಾಪಿಸಲಾಗಿದೆ. ಅವರು ಅಂದಿನ ಕಾಲಘಟ್ಟದಲ್ಲಿಯೇ ಭೂ ರಕ್ಷಣೆ, ಸ್ತ್ರೀ ರಕ್ಷಣೆ, ನೆಲ ಹಾಗೂ ಗೋ ರಕ್ಷಣೆಗಾಗಿ ತಮ್ಮನ್ನು ತೊಡಗಿಸಿಕೊಂಡಿದ್ದರು. ನಾವೆಲ್ಲರೂ ಇದನ್ನು ಮುಂದುವರೆಸಿಕೊಂಡು ಹೋಗಬೇಕು ಎಂದ ಅವರು, ಮಹಾಪುರುಷರ ಜಯಂತಿಯನ್ನು ಆಚರಿಸುವ ಮೂಲಕ ಅವರ ಆದರ್ಶಗಳನ್ನು ಅನುಷ್ಠಾನಮಾಡುವ ದೃಷ್ಠಿಯಲ್ಲಿ ಪ್ರತಿಯೊಬ್ಬರೂ ಕ್ರಿಯಾಶೀಲರಾಗಿ ಕೆಲಸ ಮಾಡಬೇಕು ಎಂದರು. ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್, ಕ.ಸಾ.ಪ ಕಾರ್ಯದರ್ಶಿ ನರಸಿಂಹಮೂರ್ತಿ, ಕನ್ನಡ ಉಪನ್ಯಾಸಕ ರಾಮಾಂಜಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.