ಉಡುಪಿ, ಮೇ 19: ಉಡುಪಿ ಜಿಲ್ಲೆಯ ಕೆಲವು ಗ್ರಾ.ಪಂ ಹಾಗೂ ಉಡುಪಿ ಮತ್ತು ಬೈಂದೂರು ಸ್ಥಳೀಯಾಡಳಿತ ವ್ಯಾಪ್ತಿಯ ಕೆಲವು ಕಡೆ ಈ ಬಾರಿ ನೀರಿನ ಸಮಸ್ಯೆ ತಲೆದೋರಿದ್ದು, ಅಲ್ಲಿಗೆ ನೀರು ಪೂರೈಕೆಗೆ ಅಗತ್ಯ ಕ್ರಮಗಳನ್ನು ತೆಗೆದು ಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ತಿಳಿಸಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾದ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಹಾಗೂ ಮಳೆಗಾಲದ ಸಿದ್ಧತೆ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.
ಬ್ರಹ್ಮಾವರ ಮತ್ತು ಬೈಂದೂರು, ಪೆರ್ಡೂರು ಗ್ರಾಪಂಗಳ ಕೆಲವು ಪ್ರದೇಶ ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಕುಂದಾಪುರ ಉಪ ವಿಭಾಗಾಧಿಕಾರಿಗಳ ನೇತೃತ್ವದ ಕಾರ್ಯಪಡೆಯಲ್ಲಿ ತೀರ್ಮಾನ ತೆಗೆದು ಕೊಂಡು ಈ ಪ್ರದೇಶಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ. ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಮೇ 4ರಿಂದ ರೇಷನಿಂಗ್ ವ್ಯವಸ್ಥೆ ಆರಂಭಿಸಲಾಗಿದೆ. ಎತ್ತರ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ 10 ವಾರ್ಡ್‌ಗಳಿಗೆ ಟ್ಯಾಂಕರ್ ನೀರು ನೀಡಲಾಗುತ್ತಿದೆ ಎಂದರು.
ಉಡುಪಿ ಜಿಲ್ಲೆಯಲ್ಲಿ ಕಾರ್ಕಳ, ಹೆಬ್ರಿ ಮತ್ತು ಬ್ರಹ್ಮಾವರ ಬರ ಪೀಡಿತ ಪ್ರದೇಶ ಎಂಬುದಾಗಿ ಘೋಷಿಸಿದ್ದು, ಜಿಲ್ಲಾಡಳಿತ ರಾಜ್ಯ ಸರಕಾರಕ್ಕೆ ಭತ್ತದ ಬೆಳೆ ಪರಿಹಾರ ನೀಡುವಂತೆ ಸರಕಾರಕ್ಕೆ ಪ್ರಾಸ್ತಾವನೆ ಸಲ್ಲಿಸಿತ್ತು. ಅದರಂತೆ ಸರಕಾರ ಈ ಮೂರು ತಾಲೂಕುಗಳ 27ಸಾವಿರ ರೈತರಿಗೆ 4.86ಕೋಟಿ ಪರಿಹಾರ ಮೊತ್ತ ಬಿಡುಗಡೆ ಮಾಡಿದೆ. ಮೊದಲ 9 ಹಂತಗಳಲ್ಲಿ ರಾಜ್ಯ ಸರಕಾರ ಮತ್ತು 10ನೇ ಹಂತದಲ್ಲಿ ಕೇಂದ್ರ ಸರಕಾರದ ಅನುದಾನ ಬಿಡುಗಡೆ ಮಾಡಿದೆ. ಈ ಪರಿಹಾರ ಮೊತ್ತವನ್ನು ಎಲ್ಲ ರೈತರ ಖಾತೆಗೆ ವರ್ಗಾವಣೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಉಡುಪಿ ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಜಿಲ್ಲೆಯ ಗ್ರಾಪಂ ವ್ಯಾಪ್ತಿಯಲ್ಲಿ ಯಾವುದೇ ರೀತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ. ಜಿಲ್ಲೆಯ ಬಹ್ಮಾವರ, ಕುಂದಾಪುರ ಹಾಗೂ ಹೆಬ್ರಿ, ಬೈಂದೂರು ತಾಲೂಕಿನ 23 ಗ್ರಾಪಂಗಳ ಕೆಲವು ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರನ್ನು ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ನಗರಸಭೆ ಪೌರಾಯುಕ್ತ ರಾಯಪ್ಪ, ವಾರ್ತಾಧಿಕಾರಿ ಮಂಜುನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಐ.ಪಿ.ಗಡಾದ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್, ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಆರಾಡಿ ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ವಂದಿಸಿದರು. ಕಾರ್ಯದರ್ಶಿ ರಹಿೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು.