ಉಡುಪಿ, ಜೂ.21: ಭಾರತ ದೇಶವು ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ್ದು ನಮ್ಮೆಲರಿಗೂ ಹೆಮ್ಮೆಯ ವಿಚಾರವಾಗಿದೆ. ಸುಮಾರು 5000 ವರ್ಷಗಳ ಹಿಂದೆ ದೇಶದಲ್ಲಿ ಆರಂಭಗೊಂಡ ಯೋಗವು ಇಂದು 193 ಕ್ಕೂ ಹೆಚ್ಚು ದೇಶಗಳಲ್ಲಿ ಪ್ರಸಿದ್ಧಿ ಪಡೆದು ಭಾರತೀಯ ಪರಂಪರೆಯನ್ನು ವಿಶ್ವವ್ಯಾಪ್ತಿಗೊಳಿಸಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಶುಕ್ರವಾರ ನಗರದ ಅಜ್ಜರಕಾಡಿನ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್, ರಾಷ್ಟ್ರೀಯ ಸೇವಾ ಯೋಜನೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಹಾಗೂ ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ದೈನಂದಿನ ಜೀವನ ಶೈಲಿಯಲ್ಲಿ ಯೋಗವು ಬಹುಮುಖ್ಯ ಪಾತ್ರ ವಹಿಸುತ್ತದೆ. ಪ್ರತಿಯೊಬ್ಬರು ಜೀವನದಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯದ ವೃದ್ಧಿಗಾಗಿ ಯೋಗವನ್ನು ರೂಢಿಸಿಕೊಂಡು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಯಶ್‌ಪಾಲ್ ಎ.ಸುವರ್ಣ ಮಾತನಾಡಿ, ಯೋಗದ ಮಹತ್ವವನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಯೋಗ ದಿನಾಚರಣೆಯನ್ನು ಆಚರಿಸಿಕೊಂಡು ಬಂದಿದ್ದು ಯೋಗವು ಆರೋಗ್ಯವಂತ ಜೀವನವನ್ನು ರೂಪಿಸುತ್ತದೆ. ಯುವ ಜನತೆ ಸೇರಿದಂತೆ ಎಲ್ಲರೂ ಯೋಗಾಭ್ಯಾಸವನ್ನು ಮಾಡಬೇಕು. ಆರೋಗ್ಯವಂತ ಜೀವನ ಶೈಲಿಗೆ ಯೋಗ ಅತ್ಯಂತ ಅವಶ್ಯವಾದದು. ಎಲ್ಲರೂ ಪ್ರತಿನಿತ್ಯ ಯೋಗ ಮಾಡುವ ಮೂಲಕ ಯೋಗ ಜೀವನ ನಡೆಸೋಣ ಎಂದರು. ಭಾರತೀಯ ಸಂಸ್ಕೃತಿಯ ಬಹುಮುಖ್ಯವಾದ ಅಂಗವಾದ ಯೋಗವು ಮಾನವನ ಸ್ವಾಸ್ಥ್ಯವನ್ನು ಕಾಪಾಡುವಲ್ಲಿ ತನ್ನದೇ ಆದ ಮಹತ್ವದ ಕೊಡುಗೆಯನ್ನು ನೀಡಿದೆ. ಯೋಗವು ವಿಶ್ವದಾದ್ಯಂತ ಜನಮನ್ನಣೆಯನ್ನು ಪಡೆದಿದ್ದು, ಇಂದಿನ ಯುವಜನಾಂಗಕ್ಕೆ ಯೋಗದ ಬಗ್ಗೆ ಅರಿವನ್ನು ಉಂಟುಮಾಡುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಜೀವನದಲ್ಲಿ ಆರೋಗ್ಯವಾಗಿರಲು ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಉತ್ತಮವಾದ ಹವ್ಯಾಸವಾಗಿ ಯೋಗವನ್ನು ರೂಢಿಸಿಕೊಳ್ಳಬೇಕು ಎಂದರು. ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಮಾತನಾಡಿ, ಪ್ರತಿಯೊಬ್ಬರ ಜೀವನ ಶೈಲಿಯಲ್ಲಿ ಯೋಗ ಪ್ರಮುಖ ಪಾತ್ರವಹಿಸುತ್ತದೆ. ಆದ್ದರಿಂದ ಎಲ್ಲರೂ ಯೋಗವನ್ನು ಕಲಿತು, ಉತ್ತಮ ಆರೋಗ್ಯ ಹೊಂದುವಂತಾಗಲಿ ಎಂದು ಆಶಿಸಿದರು. ಸಭಾ ಕಾರ್ಯಕ್ರಮದ ನಂತರ ಸುಮಾರು 45 ನಿಮಿಷಗಳ ಯೋಗದ ಪ್ರಾತ್ಯಕ್ಷಿಕೆ ನಡೆಯಿತು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರು ಯೋಗಾಸನದ ವಿವಿಧ ಆಸನಗಳನ್ನು ಅಭ್ಯಾಸ ಮಾಡಲಾಯಿತು. ಯೋಗ ತರಬೇತುದಾರರಾದ ಚೆನ್ನಮ್ಮ ಉಡುಪ ಹಾಗೂ ಶೋಭಾ ಶೆಟ್ಟಿ ಯೋಗ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ.ಸತೀಶ್ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಡಾ. ವೀಣಾ ಕಾರಂತ್ ನಿರೂಪಿಸಿ, ವೈದ್ಯಾಧಿಕಾರಿ ಡಾ. ನಾಗರಾಜ್ ಕೌಲಗಿ ವಂದಿಸಿದರು.