ಉಡುಪಿ, ಜು.22: ಶಿವಶರಣರು ರಚಿಸಿದ ವಚನ ಸಾಹಿತ್ಯಗಳು ಬರೀ ಸಾಮಾಜಿಕವಾಗಿ ಮಾತ್ರವಲ್ಲದೆ ಸಾಹಿತ್ಯಿಕ, ಶೈಕ್ಷಣಿಕ ಹಾಗೂ ಧಾರ್ಮಿಕವಾಗಿ ಸಮಾಜ ಸುಧಾರಣೆಗೆ ಮಾದರಿಯಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಅವರು ಸೋಮವಾರ ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ನಡೆದ ಶಿವಶರಣ ಹಡಪದ ಅಪ್ಪಣ್ಣರವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಪ್ಪಣ್ಣರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು. ಬಸವಣ್ಣನವರ ವಿಶ್ವಾಸದ ನಿಷ್ಠಾವಂತ ಆಪ್ತ ಕಾರ್ಯದರ್ಶಿಗಳಾಗಿ ಬಸವಣ್ಣನವರ ಯಶಸ್ಸಿನ ಶಕ್ತಿಯಾಗಿ ಹಡಪದ ಅಪ್ಪಣ್ಣನವರು ಗುರುತಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ವಚನಕಾರರ ವಚನದ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ನಡೆಯಬೇಕು ಎಂದರು. ಸಾಂಸ್ಕೃತಿಕ ಚಿಂತಕ ಡಾ.ಶ್ರೀಕಾಂತ್ ಸಿದ್ದಾಪುರ ಉಪನ್ಯಾಸ ನೀಡಿ ಮಾತನಾಡುತ್ತಾ, 12ನೇ ಶತಮಾನದ ಮಹತ್ವ ಪೂರ್ಣ ಕಾಲಘಟ್ಟದಲ್ಲಿ ಕಾಯಕ ನಿಷ್ಠೆಯ ಬಸವಾದಿ ಶರಣರು ಮೇಲು-ಕೀಳು, ಜಾತಿ ಪದ್ಧತಿ, ಮೌಲ್ಯ, ಕಂದಾಚಾರಗಳ ವಿರುದ್ಧ ಧ್ವನಿ ಎತ್ತಿ ಸಮ-ಸಮಾಜ ನಿರ್ಮಾಣಕ್ಕೆ ನಾಂದಿ ಹಾಕಿದರು ಎಂದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಪ್ರಾಂಶುಪಾಲ ಡಾ. ಸುರೇಶ್ ರೈ.ಕೆ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಕಾರ್ಯದರ್ಶಿ ನರಸಿಂಹ ಮೂರ್ತಿ, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಇಲಾಖೆಯ ಶಶಿಧರ್ ನಿರೂಪಿಸಿ, ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಕರಬ ವಂದಿಸಿದರು.