ಮೈಸೂರು, ಆ.10: ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಸ್ಥಗಿತವಾಗಿದೆ. ಹಗಲು ದರೋಡೆ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಶನಿವಾರ ಮೈಸೂರಿನ ಮಹಾರಾಜ ಮೈದಾನದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಜೆಡಿಎಸ್ ನಡೆಸಿದ ‘ಮೈಸೂರು ಚಲೋ’ ಪಾದಯಾತ್ರೆಯ ಸಮಾರೋಪ ಸಮಾರಂಭದ ಸಮಾವೇಶದಲ್ಲಿ ಅವರು ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಪ್ಪುಚುಕ್ಕೆ ರಹಿತ ಎಂದು ಹೇಳಿಕೊಂಡಿದ್ದಾರೆ. ಆದರೆ ಎಲ್ಲ ಕಡೆ ಕಪ್ಪು ಚುಕ್ಕೆ ಕಾಣಿಸುತ್ತಿದೆ ಎಂದರು. ಇದೇ ಸಂದರ್ಭದಲ್ಲಿ 5,000 ನಿವೇಶನಗಳನ್ನು ನುಂಗಿದ ಆ 14 ನಿವೇಶನಗಳು ಎಂಬ ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಲಾಯಿತು.
ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ, ಡಿ.ವಿ. ಸದನಂದ ಗೌಡ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಹಾಗೂ ರಾಜ್ಯ ಉಸ್ತುವಾರಿ ಡಾ. ರಾಧಾಮೋಹನದಾಸ್ ಅಗರ್ವಾಲ್, ಸಿಟಿ ರವಿ, ಡಾ. ಅಶ್ವತ್ಥನಾರಾಯಣ, ಅರವಿಂದ ಬೆಲ್ಲದ್, ಶ್ರೀರಾಮುಲು, ಗೋವಿಂದ ಕಾರಜೋಳ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಸಂಸದರು, ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.