ಉಡುಪಿ, ಆ.12: ಮಾದಕ ವಸ್ತುಗಳ ದುಶ್ಚಟದಿಂದ ದೂರವಿದ್ದಾಗ ಮಾತ್ರ ಯುವಜನರು ಉತ್ತಮ ಆರೋಗ್ಯ ಹೊಂದಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಭಾರತೀಯ ರೆಡ್ ಕ್ರಾಸ್, ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ ಜಿನೇವಾ ಒಪ್ಪಂದಗಳ ಸ್ಮರಣೆ ಮತ್ತು ನಶಾಮುಕ್ತ ಭಾರತ ಅಭಿಯಾನದ ಅಂಗವಾಗಿ ನಡೆದ ಜಾಥಾಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು.
ನಮ್ಮ ದೇಶದಲ್ಲಿ ಅಪಾರವಾದ ಯುವಶಕ್ತಿಯಿದೆ. ಆದರೆ ಯುವ ಶಕ್ತಿಯ ಸದ್ಬಳಕೆಯಲ್ಲಿ ಮಾದಕ ವ್ಯಸನವು ಒಂದು ಸವಾಲಾಗಿದೆ. ಇದರಿಂದ ಮಾದಕ ವ್ಯವಸದ ವಿರುದ್ಧ ಆಂದೋಲನವನ್ನು ಪ್ರತಿಯೊಬ್ಬ ವ್ಯ÷ಕ್ತಿಯ ಅಂತರಂಗಗಕ್ಕೂ ಮುಟ್ಟಿಸಬೇಕಾಗಿದೆ. ಇದು ಈ ಅಭಿಯಾನದ ಮುಖ್ಯ ಉದ್ದೇಶ ಎಂದರು. ಯುವ ಪೀಳಿಗೆಯು ದುಶ್ಚಟಗಳಿಗೆ ಒಳಗಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರವು ನಶಾ ಮುಕ್ತ ಭಾರತ ಅಭಿಮಾನವನ್ನು ಹಮ್ಮಿಕೊಂಡಿದ್ದು, ಯುವಜನತೆಯು ಮಾದಕ ವ್ಯಸನಗಳ ದುಷ್ಪರಿಣಾಮಗಳನ್ನು ಅರಿಯುವುದರೊಂದಿಗೆ ಮಾದಕ ವ್ಯಸನ ಮುಕ್ತ ಸಮಾಜದ ನಿರ್ಮಾಣ ಮುಂದಾಗಬೇಕು ಎಂದರು. ಯುವ ಜನತೆಯು ಜವಾಬ್ದಾರಿಗಳನ್ನು ಮರೆತು ಮಾದಕ ವ್ಯಸನಗಳ ಸೇವನೆಯಿಂದ ತಮ್ಮ ಅಮೂಲ್ಯ ಬದುಕನ್ನು ಕಳೆದುಕೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಸಮಾಜ ಘಾತುಕ ಶಕ್ತಿಗಳಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇದ್ದು, ಇಂದಿನಿಂದಲೇ ಅವುಗಳ ಕುರಿತು ಅರಿವು ಮೂಡಿಸುವುದು ಅತ್ಯವಶ್ಯಕವಾಗಿದೆ. ಜಾಥದ ಮೂಲಕ ಪ್ರತಿಯೊಬ್ಬರಿಗೂ ಈ ಕುರಿತು ಸಂದೇಶ ನೀಡಬೇಕು ಎಂದರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಡಾ. ಗಣನಾಥ್ ಎಕ್ಕಾರು ಪ್ರತಿಜ್ಷಾವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಮೊಬೈಲ್ ಆರೋಗ್ಯ ವಾಹನಕ್ಕೆ ಚಾಲನೆ ನೀಡಲಾಯಿತು. ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್. ಟಿ ಸಿದ್ದಲಿಂಗಪ್ಪ, ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಭಾಸ್ಕರ್ ಶೆಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಐ.ಪಿ ಗಡಾದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವಿಕಲಚೇತನ ಕಲ್ಯಾಧಿಕಾರಿ ರತ್ನಾ, ರೆಡ್‌ಕ್ರಾಸ್‌ನ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ, ರೆಡ್‌ಕ್ರಾಸ್ ಆಡಳಿತ ಮಂಡಳಿಯ ಸದಸ್ಯ ಚಂದ್ರಶೇಖರ್, ಗೌರವ ಖಜಾಂಜಿ ರಮಾದೇವಿ, ನೋಡೆಲ್ ಅಧಿಕಾರಿ ಜಯಶ್ರೀ, ವಿವಿಧ ಇಲಾಖೆಗಳ ಸಿಬ್ಬಂದಿಗಳು, ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಭಾರತೀಯ ರೆಡ್ ಕ್ರಾಸ್‌ನ ಜಿಲ್ಲಾ ಸಭಾಪತಿ ಬಸ್ರೂರ್ ರಾಜೀವ ಶೆಟ್ಟಿ ಸ್ವಾಗತಿಸಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ನಿರೂಪಿಸಿದರು.